ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪರ,ಅ.7: ವಸತಿನಿಯಲದ ನಿಲಯ ಪಾಲಕರು ಮತ್ತು ಸಿಬ್ಬಂದಿ ವಿದ್ಯಾರ್ಥಿಗಳಿಗೆ ನಿಲಯದ ಸವಲತ್ತುಗಳನ್ನು ಸಮರ್ಪಕವಾಗಿ ಕಲ್ಪಿಸುವ ಜೊತೆಗೆ ಸೌರ್ಹಾದತೆಯಿಂದ ನಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.
ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿರುವ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕುಂದು ಕೊರತೆಗಳನ್ನು ಸುದೀರ್ಘವಾಗಿ ಆಲಿಸಿದರು. ನಂತರ ಅಲ್ಲಿನ ಅಧಿಕಾರಿ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.
ನಿಲಯದ ಅಡುಗೆ ಮನೆಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು, ವಾಟರ್ ಫಿಲ್ಟರ್ನ್ನು ಬದಲಾವಣೆ ಮಾಡಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳ ಕೊಠಡಿಗಳಿಗೆ ಉತ್ತಮ ರೀತಿಯಲ್ಲಿ ಬೆಳಕಿನ ವ್ಯವಸ್ಥೆ, ವಿದ್ಯಾರ್ಥಿಗಳ ಶುಚಿಕಿಟ್ ಪೂರೈಕೆ, ಪ್ರಥಮ ಚಿಕಿತ್ಸೆ ಪೆಟ್ಟಿಗೆ, ಆರೋಗ್ಯ ಸೇವೆ, ದೂರವಾಣಿ ಮತ್ತು ಕಂಪ್ಯೂಟರ್ ಲ್ಯಾಬ್ಗಳಿಗೆ ಇಂಟರ್ನೆಟ್ ವ್ಯವಸ್ಥೆ, ಹೆಚ್ಚುವರಿಯಾಗಿ ಸ್ನಾನದ ಬಕೆಟ್ಗಳ ಪೂರೈಕೆ, ಲೈಬ್ರರಿ ವ್ಯವಸ್ಥೆ ಮಾಡಿಕೊಡುವ ಜೊತೆಗೆ ನಿಲಯದ ಶೌಚಾಲಯದಲ್ಲಿ ನೀರು ಸೋರುವಿಕೆಯನ್ನು ನಿಲ್ಲಿಸಲು ದುರಸ್ತಿ ಕಾರ್ಯ ಮಾಡಿಕೊಡಲು ಜಿಲ್ಲಾಧಿಕಾರಿಗಳನ್ನು ಕೋರಿದರು.
ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ನಿಲಯಕ್ಕೆ ಅಗತ್ಯವಿರುವ ಮೂಲ ಭೂತ ಸೌಲಭ್ಯಗಳು ಹಾಗೂ ವಿದ್ಯಾರ್ಥಿಗಳು ಕೋರಿರುವ ಎಲ್ಲಾ ವ್ಯವಸ್ಥೆಗಳನ್ನು ಆಧ್ಯತೆ ಮೇರೆ ಕ್ರಮಕೈಗೊಳ್ಳಲು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬಾಗೇಪಲ್ಲಿ ಮತ್ತು ವಿದ್ಯಾರ್ಥಿನಿಲಯದ ಮೇಲ್ವಿಚಾರಕರಿಗೆ ಸೂಚಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳು ಮತ್ತು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ವಿದ್ಯಾರ್ಥಿಗಳೊಂದಿಗೆ ರಾತ್ರಿ ಊಟ ಸೇವಿಸಿ ಸರ್ಕಾರದ ಈ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮ ಪಡಿಸಿಕೊಳ್ಳಲು ಕಠಿಣ ಪರಿಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕೆಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶೇಷಾದ್ರಿ, ನಿಲಯದ ಮೇಲ್ವಿಚಾರಕಿ ಪಿ.ಆರ್.ಲಕ್ಷ್ಮೀ ಹಾಗೂ ಸಿಬ್ಬಂದಿ ಇದ್ದರು.