ಸುದ್ದಿಮೂಲ ವಾರ್ತೆ
ಬೆಂಗಳೂರು,ಅ.2; ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶಾಲೆಗಳನ್ನು ಇಡೀ ರಾಜ್ಯದಲ್ಲಿಯೇ ಮಾದರಿ ಶಾಲೆಗಳನ್ನಾಗಿ ಅಭಿವೃದ್ಧಿಪಡಿಸುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಮಹಾತ್ಮ ಗಾಂಧೀಜಿಯವರ ಜನ್ಮದಿನದಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನನ್ನ ಶಾಲೆ ನನ್ನ ಕೊಡುಗೆ ಕಾರ್ಯಕ್ರಮದಡಿ ಸಿ.ಎಸ್.ಆರ್ ಅನುದಾನದಲ್ಲಿ “ಮಾದರಿ ಸರ್ಕಾರಿ ಶಾಲೆ” ಯೋಜನೆಯಡಿ ದೇವನಹಳ್ಳಿಯ ವಿಶ್ವನಾಥಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲಾ ಆವರಣದಲ್ಲಿ ನಿರ್ಮಿಸಿರುವ ಮಾದರಿ ಸರ್ಕಾರಿ ಶಾಲೆ ಮತ್ತು ನೂತನ ಶಾಲಾ ಕೊಠಡಿಗಳು ಹಾಗೂ ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಂದು ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ಅದರಲ್ಲೂ ನಿರ್ದಿಷ್ಟವಾಗಿ ಸರ್ವಾಂಗೀಣ ಶಿಕ್ಷಣ ಇಂದಿನ ಅಗತ್ಯವಾಗಿದೆ. ನಮಗೆ ಅಧಿಕಾರ ಇರುವಾಗ ತಂದೆ ತಾಯಿಗಳಿಗೆ ಹೊರೆಯಾಗದಂತೆ ಗುಣಮಟ್ಟ ಶಿಕ್ಷಣ ನೀಡುವುದು ನಮ್ಮ ಅಚಲ ಬದ್ಧತೆಯಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ನಮ್ಮ ವಿದ್ಯಾರ್ಥಿಗಳು ಸಿಇಟಿ – ನೀಟ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಮುಂದಿನ ಹಂತದ ಶಿಕ್ಷಣ ಪಡೆದರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದರು.
ಮಧು ಬಂಗಾರಪ್ಪ ಅವರು ಶಿಕ್ಷಣ ಇಲಾಖೆಯ ಜವಾಬ್ದಾರಿಹೊರತ್ತಿರುವುದು ಸಂತಸ ತಂದಿದೆ. ವಿದ್ಯುತ್ ಕೊರತೆ ಇದ್ದ ಸಂದರ್ಭದಲ್ಲಿ ಅವರ ತಂದೆ ಬಂಗಾರಪ್ಪ ಆಗಲೇ ವಿದ್ಯುತ್ ಮನ್ನಾ ಯೋಜನೆ ಜಾರಿಗೆ ತಂದಿದ್ದರು. ತಂದೆ ಬಂಗಾರಪ್ಪ ಅವರ ಚಿಂತನೆಯನ್ನು ಮಧು ಬಂಗಾರಪ್ಪ ಮೈಗೂಡಿಸಿಕೊಂಡಿದ್ದು, ಶಾಲಾ ವಾತಾವರಣವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಇವರಲ್ಲಿ ಕೆಲಸ ಮಾಡುವ ಛಲ ಇದ್ದು, ಶೈಕ್ಷಣಿಕ ವಾತಾವರಣದಲ್ಲಿ ಬದಲಾವಣೆ ತರಲಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್ ಅವರನ್ನು ಅಧ್ಯಯನ ಮಾಡಿ ಅವರ ತತ್ವ ಚಿಂತನೆಗಳನ್ನು ಅಳವಡಿಸಿಕೊಂಡರೆ ಮಾತ್ರ ವ್ಯವಸ್ಥೆಯಲ್ಲಿ ಉತ್ತಮ ಚಿಂತನೆ ಮೂಡಲು ಸಾಧ್ಯ. ಎಂದು ಆಶಯ ವ್ಯಕ್ತಪಡಿಸಿದರು.
ಸಿ.ಎಸ್.ಆರ್ ನಿಧಿಯಡಿ ಇನ್ನೂ ಹೆಚ್ಚಿನ ನೆರವು ದೊರಕಿಸಿಕೊಡುವುದಾಗಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾರೆ. ಇದರಿಂದ ಮಾದರಿ ಶಾಲೆಗಳನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಶಿಕ್ಷಣದಲ್ಲಿ ಕಲೆ, ಕ್ರೀಡೆ, ಸಂಸ್ಕೃತಿ ಹೀಗೆ ಸಮಗ್ರ ಶಿಕ್ಷಣ ನೀಡಿದರೆ ವ್ಯಕ್ತಿತ್ವ ನಿರ್ಮಾಣದ ಜೊತೆಗೆ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಲಿದೆ ಎಂದು ಕೆ.ಎಚ್. ಮುನಿಯಪ್ಪ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅನ್ನಭಾಗ್ಯ ಯೋಜನೆ ಬಡವರ ಬಗ್ಗೆ ಅವರಿಗೆ ಇರುವ ಕಾಳಜಿಯ ಪ್ರತೀಕವಾಗಿದೆ. ಜನರಿಗೆ ನೀಡಿದ ವಾಗ್ದಾನದಂತೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲು ಅವರು ತೋರುತ್ತಿರುವ ಉತ್ಸುಕತೆ ಅವರ ಮುತ್ಸದ್ದಿತನಕ್ಕೆ ಸಾಕ್ಷಿಯಾಗಿದೆ. ಶಾಲೆಗಳ ಗುಣಮಟ್ಟ ಹೆಚ್ಚಿಸಲು ಅವರು ಪ್ರಯತ್ನ ನಡೆಸುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಶಾಲೆಗಳು ನಗರದ ಶಾಲೆಗಳಿಗೆ ಯಾವುದೇ ರೀತಿಯಲ್ಲೂ ಕಡಿಮೆ ಇಲ್ಲದಂತೆ ನಿರ್ಮಿಸುವುದು ನಮ್ಮ ಗುರಿಯಾಗಿದೆ. ಇದಕ್ಕಾಗಿ ಕಂಪೆನಿಗಳ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ ನಿಧಿಯಿಂದ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ ಮಾತನಾಡಿ, ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಶೇ ೪೦೦ ರಷ್ಟು ಬೇಡಿಕೆ ಕಂಡು ಬಂದಿದ್ದು, ಇಲ್ಲಿ ಇಂಗ್ಲಿಷ್ ಜೊತೆಗೆ ಕನ್ನಡ ಕಲಿಕೆಗೆ ಒತ್ತು ನೀಡಲಾಗುತ್ತಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರಗಳು ಒಳಗೊಂಡಂತೆ ಮುಂದಿನ ವರ್ಷ ೬೦೦ ಪಬ್ಲಿಕ್ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಖಾಸಗಿ ಶಾಲೆಗಳ ಮಾದಿರಯಲ್ಲಿ ವಿದ್ಯಾರ್ಥಿಗಳಿಗೆ ವಾಹನ ಸೌಕರ್ಯ ಒಳಗೊಂಡು ಎಲ್ಲಾ ವ್ಯವಸ್ಥೆ ಕಲ್ಪಿಸಲಾಗುವುದು. ಎರಡೂವರೆ ಮೂರು ವರ್ಷಗಳಲ್ಲಿ ಎರಡು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸುವ ಗುರಿ ಹೊಂದಿದ್ದು, ಒಂದರಿಂದ ೧೨ ನೇ ತರಗತಿ ವರೆಗೆ ಅಧ್ಯಯನಕ್ಕೆ ಇಲ್ಲಿ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿಯನ್ನೂ ಸಹ ಆರಂಭಿಸುತ್ತಿದ್ದೇವೆ ಎಂದು ಪ್ರಕಟಿಸಿದರು.
ರಾಜ್ಯದಲ್ಲಿ ೫೩ ಸಾವಿರ ಶಿಕ್ಷಕರ ಕೊರತೆ ಇದ್ದು, ೧೩,೫೦೦ ಶಿಕ್ಷಕರ ನೇಮಕಾತಿ ಕುರಿತ ತೀರ್ಪು ನ್ಯಾಯಾಲಯದಲ್ಲಿ ಬಾಕಿ ಇದೆ. ವ್ಯಾಜ್ಯ ಇತ್ಯರ್ಥವಾದರೆ ಸಾಕಷ್ಟು ಸಮಸ್ಯೆ ಬಗೆಹರಿಯಲಿದೆ. ಕಲ್ಯಾಣ ಕರ್ನಾಟಕದಲ್ಲಿ ಸಮಸ್ಯೆ ತಗ್ಗಲಿದೆ. ಇದರ ಜೊತೆಗೆ ಈ ಬಾರಿ ಜಾರಿಗೆ ತಂದ ಮೂರು ಪರೀಕ್ಷಾ ಪದ್ಧತಿ ಅಧ್ಯಯನಕ್ಕೆ ಪೂರಕವಾಗಿದ್ದು, ಕಳೆದ ತಿಂಗಳು ನಡೆದ ಮೂರನೇ ಪರೀಕ್ಷೆಯಲ್ಲಿ ಪಿಯುಸಿಯ ೧.೨೦ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದರು. ಫಲಿತಾಂಶ ಬಂದ ನಂತರ ೪೨ ಸಾವಿರ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಇಂತಹ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ಆರಂಭಿಸಲಾಗುತ್ತಿದೆ ಎಂದು ಹೇಳಿದರು.
ಈ ಹಿಂದೆ ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಅಕ್ಷಯ ಎಂಬ ಕಾರ್ಯಕ್ರಮ ಆಯೋಜಿಸಿದ್ದರು. ವಿದ್ಯಾರ್ಥಿಗಳು ಶಾಲೆಗಳಿಗೆ ಹೋದರೆ ಒಂದು ರೂಪಾಯಿ ನೀಡಲಾಗುತ್ತಿತ್ತು. ೩೨ ವರ್ಷಗಳ ಹಿಂದೆ ವಾರಕ್ಕೆ ಆರು ರೂಪಾಯಿ ಎಂದರೆ ಅದು ದೊಡ್ಡ ಮೊತ್ತವಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿ.ಎಸ್.ಆರ್ ನಿಧಿಯಡಿ ಬರುವ ಹಣವನ್ನು ಶೈಕ್ಷಣಿಕ ಉದ್ದೇಶಕ್ಕೆ ಬಳಸುವಂತೆ ಸೂಚಿಸಿದ್ದಾರೆ. ಇದು ಅತ್ಯಂತ ಮಹತ್ವದ ಬಳವಣಿಗೆಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಸಕರಾದ ಶರತ್ ಬಚ್ಚೇಗೌಡ, ಧೀರಜ್ ಮುನಿರಾಜ್, ವಿಧಾನಪರಿಷತ್ ಸದಸ್ಯರಾದ ಎಸ್ ರವಿ, ಅ ದೇವೇಗೌಡ ಮತ್ತಿತರರು ಉಪಸ್ಥಿತರಿದ್ದರು.