ಸುದ್ದಿಮೂಲ ವಾರ್ತೆ
ತುಮಕೂರು, ಸೆ.16 : ಜಿಲ್ಲೆಯಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ಭೋಜನ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಮತ್ತಿತರ ಅಗತ್ಯ ಸೌಲಭ್ಯಗಳ ಕೊರತೆ ಕಂಡು ಬಂದಲ್ಲಿ
ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.
ಕಂದಾಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು.
ಎಲ್ಲಾ ವಸತಿ ನಿಲಯಗಳಿಗೂ ಕಡ್ಡಾಯವಾಗಿ ಆವರಣ ಗೋಡೆ ನಿರ್ಮಿಸಬೇಕು. ಭದ್ರತೆ ಹಾಗೂ ಸುರಕ್ಷತೆ ದೃಷ್ಟಿಯಿಂದ ಬಾಲಕಿಯರ ವಿದ್ಯಾರ್ ಥಿನಿಲಯಗಳಿಗೆ ಆದ್ಯತೆ ಮೇಲೆ ಆವರಣ ಗೋಡೆ ನಿರ್ಮಿಸಬೇಕು. ವಿದ್ಯಾರ್ಥಿನಿಲಯಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಲು ಕ್ರಿಯಾ ಯೋಜನೆ ತಯಾರಿಸಿ ಪ್ರಸ್ತಾವನೆ ಸಲ್ಲಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಆಡಳಿತ ಸುಧಾರಣೆಗಾಗಿ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿಯೂ ಜನಸಂಪರ್ಕ ಸಭೆಯನ್ನು ನಡೆಸಬೇಕು. ಸಭೆಯ ದಿನಾಂಕಕ್ಕೂ ಮುನ್ನ ಜನರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಂಡು ಸಭೆಯ ದಿನದಂದು ಅಹವಾಲುದಾರರಿಗೆ ಕ್ರಮವಹಿಸಿದ ಬಗ್ಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವ ದೃಷ್ಟಿಯಿಂದ ಎಲ್ಲಾ ತಾಲ್ಲೂಕು ತಹಶೀಲ್ದಾರರು ಆಯಾ ತಾಲ್ಲೂಕಿನ ಅಧಿಕಾರಿಗಳೊಂದಿಗೆ ಟಾಸ್ಕ್ ಫೋರ್ಸ್(ಕಾರ್ಯಪಡೆ) ಸಭೆ ನಡೆಸಿ ಕುಡಿಯುವ ನೀರು, ಜಾನುವಾರುಗಳ ಮೇವು, ಬೆಳೆ ನಷ್ಟ ಪರಿಹಾರ ವಿತರಣೆ, ನರೇಗಾ ಯೋಜನೆಯಡಿ ಕಾಮಗಾರಿ ನೀಡುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು.
ಗ್ರಾಮೀಣ ಭಾಗದ ರೈತರಿಗೆ ಬರ ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟವನ್ನು ನಿವಾರಿಸಲು ಈಗಾಗಲೇ ನರೇಗಾ ಯೋಜನೆಯಡಿ 1.50ಲಕ್ಷ ಕಾಮಗಾರಿಗಳು ಹಾಗೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಜಲ್ ಜೀವನ್ ಮಿಷನ್ಯೋಜನೆಯಡಿ 1500 ಕೊಳವೆ ಬಾವಿ ಕೊರೆಸಲು ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.