ಚಿಕ್ಕಬಳ್ಳಾಪುರ,ಸೆ.8: ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣ ಹಂತದಲ್ಲಿರುವ ಜಿಲ್ಲಾ ಕನ್ನಡ (ಕಲಾ)ಭವನದ ಕಟ್ಟಡಕ್ಕೆ ಒಟ್ಟು ಅಂದಾಜು ಮೊತ್ತದ 12.5 ಕೋಟಿ ಪೈಕಿ ಈಗಾಗಲೇ 11.5 ಕೋಟಿ ರೂಪಾಯಿಗಳು ಖರ್ಚಾಗಿದ್ದು, ಬಾಕಿ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 6.3 ಕೋಟಿ ರೂಪಾಯಿಗಳ ಅಗತ್ಯವಿದ್ದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ಅವರು ಶುಕ್ರವಾರ ಸಂಜೆ ಜಿಲ್ಲಾ ಕೇಂದ್ರದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳ ಹಿಂದೆ ಜಿಲ್ಲಾ ಕೇಂದ್ರದಲ್ಲಿ 12.5 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲಾ ಕಲಾಭವನ ಕಾಮಗಾರಿಗೆ ಶಂಕುಸ್ಥಾಪನೆಯಾಗಿತ್ತು. ಈ ಕಾಮಗಾರಿಗೆ ಈವರೆಗೆ 11.5 ಕೋಟಿ ಅನುದಾನ ಖರ್ಚಾಗಿದ್ದು, ಒಂದು ಕೋಟಿ ರೂಪಾಯಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿದೆ. ಬಾಕಿ ಇರುವ ಕಾಮಗಾರಿ ಪೂರ್ಣಗೊಳ್ಳಲು ಇನ್ನೂ 6.3 ಕೋಟಿ ರೂಪಾಯಿ ಅನುದಾನದ ಅಗತ್ಯವಿದೆ. ಅಗತ್ಯವಿರುವ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಶೀಘ್ರ ಅನುದಾನ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಜೊತೆ ಚರ್ಚಿಸಿ ಮನವಿ ಮಾಡಲಾಗಿದೆ. ಶೀಘ್ರದಲ್ಲಿಯೇ ಸ್ವಲ್ಪ ಅನುದಾನ ಒದಗಿಸುವ ಭರವಸೆಯನ್ನು ಇಲಾಖೆಯ ಸಚಿವರು ನೀಡಿದ್ದಾರೆ. ಅಲ್ಲದೇ, ಡಿಸೆಂಬರ್ ನಂತರ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಭವನವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಜಿಲ್ಲಾಡಳಿತ ಹೇಗೆ ಸಂಪನ್ಮೂಲವನ್ನು ಕ್ರೋಢೀಕರಿಸಬಹುದು ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ ವಿವಿಧ ಕಾರಣಗಳಿಂದ ಕಲಾಭವನ ಕಾಮಗಾರಿಗೆ ಹಿನ್ನಡೆಯಾಗಿ ಲೋಕಾರ್ಪಣೆಗೊಳ್ಳುವುದು ವಿಳಂಬವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಕೇಂದ್ರದಲ್ಲಿ ಸಾಹಿತ್ಯ,ಕಲೆ, ಕನ್ನಡಾಭಿಮಾನ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸಿ ಸಾಹಿತ್ಯಕ ಹಾಗೂ ಸಾಂಸ್ಕೃತಿಕ ವಾತಾವರಣ ನಿರ್ಮಿಸುವ ದೃಷ್ಟಿಯಿಂದ ಆದಷ್ಟು ಶೀಘ್ರ ಕಲಾಭವನ ಕಾಮಗಾರಿ ಪೂರ್ಣಗೊಳಿಸಲಾಗುವುದು. ಜೊತೆಗೆ ಭವನದ ಕಂಪೌಂಡ್ ನಿರ್ಮಾಣ, ಕಲ್ಯಾಣಿ ಜೀರ್ಣೋದ್ಧಾರ ಅಭಿವೃದ್ಧಿ ಸೇರಿದಂತೆ, ಅತ್ಯಾಧುನಿಕವಾಗಿ ಹಾಗೂ ಸುಸಜ್ಜಿತವಾಗಿ ಕನ್ನಡ ಭವನವನ್ನು ನಿರ್ಮಿಸಲಾಗುವುದು ಎಂದರು.
ಕನ್ನಡ ಭವನದ ಕಾಮಗಾರಿ ವೀಕ್ಷಣೆ ನಂತರ ಸಚಿವರು ಜಿಲ್ಲಾ ಕೇಂದ್ರದಲ್ಲಿ ಪ್ರಗತಿಯಲ್ಲಿರುವ ಗುರುಭವನ ಕಾಮಗಾರಿ, ಎಪಿಎಂಸಿ ಮತ್ತು ಹೂವಿನ ಮಾರುಕಟ್ಟೆ ಸ್ಥಳಗಳಿಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ,ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಕಾಧಿಕಾರಿ ಪ್ರಕಾಶ್ ಜಿ ಟಿ ನಿಟ್ಟಾಲಿ, ಉಪ ವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಉಪ ಕಾರ್ಯದರ್ಶಿ ಡಾ. ಎನ್ ಭಾಸ್ಕರ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮನೀಷಾ, ತಹಶೀಲ್ದಾರ್ ಅನಿಲ್ ಕುಮಾರ್, ಯೋಜನಾ ಅಭಿಯಂತರರು ಹಾಗೂ ಗುತ್ತಿಗೆದಾರರು, ಕಾಂಗ್ರೆಸ್ ಮುಖಂಡರಾದ ಅಡ್ಡಗಲ್ ಶ್ರೀಧರ್, ಹಮೀಮ್, ಶಾಹೀದ್ ಅಬ್ಬಾಸ್ ಉಪಸ್ಥಿತರಿದ್ದರು.