ಸುದ್ದಿಮೂಲ ವಾರ್ತೆ
ಬೆಂಗಳೂರು, ಸೆ.28: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಂಡಾಯ ಸಾರಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚರ್ಚೆ ನಡೆಸಿ ಸಮಾಧಾನಪಡಿಸಿದ್ದಾರೆ.
ಸದಾಶಿವನಗರದ ತಮ್ಮ ಮನೆಗೆ ಬಿ.ಕೆ.ಹರಿಪ್ರಸಾದ್ ಅವರನ್ನು ಕರೆಸಿಕೊಂಡು ಮುಂಬರುವ ಲೋಕಸಭೆ ಚುನಾವಣೆ ಅತ್ಯಂತ ನಿರ್ಣಾಯಕವಾಗಿದ್ದು, ಈ ಸಂದರ್ಭದಲ್ಲಿ ದುಡುಕಿ ನಿರ್ಧಾರ ಕೈಗೊಳ್ಳುವುದು ಸೂಕ್ತವಲ್ಲ. ಪಕ್ಷದ ಹಿತ ದೃಷ್ಟಿಯಿಂದ ಬಹಿರಂಗ ಚರ್ಚೆ ನಡೆಸದಂತೆ ಕಿವಿಮಾತು ಹೇಳಿದ್ದಾರೆ.
ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಅವರ ಸಮ್ಮುಖದಲ್ಲಿ ಚರ್ಚೆ ನಡೆಸಿದ್ದು, ಬಂಡಾಯ ಕುರಿತು ಹೈಕಮಾಂಡ್ ಕಳುಹಿಸಿರುವ ಸಂದೇಶವನ್ನು ಡಿ.ಕೆ.ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ವಿವರಗಳನ್ನು ನೀಡಿದರು. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಯಾವುದೇ ಗೊಂದಲ ಮೂಡಿಸದಂತೆ ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
ಬಿ.ಕೆ.ಹರಿಪ್ರಸಾದ್ ಎಐಸಿಸಿಯಲ್ಲಿ ಸುದೀರ್ಘ ಕಾಲ ಪ್ರಧಾನ ಕಾರ್ಯದರ್ಶಿಯಾಗಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹರಿಪ್ರಸಾದ್ ವಿಧಾನಪರಿಷತ್ನ ವಿರೋಧಪಕ್ಷದ ನಾಯಕರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದ್ದಂತೆ ಅವರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಗಳಿದ್ದವು. ಆದರೆ, ಹರಿಪ್ರಸಾದ್ ಅವರನ್ನು ಕಡೆಗಣಿಸಿ ಮಧು ಬಂಗಾರಪ್ಪ ಅವರಿಗೆ ಮಣೆ ಹಾಕಲಾಗಿದೆ ಎಂಬ ಆರೋಪಗಳಿವೆ.
ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಹಿಂದುಳಿದ ವರ್ಗಗಳ ಸಮಾವೇಶದ ಪೂರ್ವಭಾವಿ ಸಭೆ ನಡೆಸಿದ ಹರಿಪ್ರಸಾದ್ ಅವರು ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಅಷ್ಟಕ್ಕೆ ಸುಮ್ಮನಾಗದೆ ಹಲವಾರು ಬಾರಿ ಹರಿ ಹಾಯ್ದಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.