ಸುದ್ದಿಮೂಲ ವಾರ್ತೆ
ತುಮಕೂರು, ಮೇ 1: ವಿಧಾನ ಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡಿದ ಅಧಿಕಾರಿ, ಸಿಬ್ಬಂದಿಗೆ ಅಂಚೆ ಮೂಲಕ ಮತದಾನ ಮಾಡಲು ಅನುವಾಗುವಂತೆ ಮೇ 3ರಂದು ಫೆಸಿಲಿಟೇಷನ್ ಸೆಂಟರ್
ಅನ್ನು ಸ್ಥಾಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿಂದು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ
ನಡೆಸಿ ಮಾತನಾಡಿದ ಅವರು, ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾದವರಿಗೆ ಮೇ 3ರಂದು ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ 2ನೇ ಹಂತದ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿ ಕೇಂದ್ರದಲ್ಲಿ ಫೆಸಿಲಿಟೇಷನ್ ಸೆಂಟರ್ ಅನ್ನು ಸ್ಥಾಪಿಸಲಾಗುವುದು. ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಿರುವ ಎಲ್ಲಾ ಸಿಬ್ಬಂದಿ ತಪ್ಪದೇ ಅಂಚೆ ಮತದಾನ ಮಾಡಬೇಕು ಎಂದು ಅವರು ಸೂಚನೆ ನೀಡಿದರು.
ಸಭೆಯಲ್ಲಿ ಪಾಲಿಕೆ ಆಯುಕ್ತ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ದರ್ಶನ್, ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ ಕರಾಳೆ, ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಸುಜಯ್, ತಹಶೀಲ್ದಾರ್ ಸಿದ್ದೇಶ್ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.