ಸುದ್ದಿಮೂಲ ವಾರ್ತೆ
ಮಂಡ್ಯ, ಆ.16 : ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಹೆಚ್ಚಿನ ನೀರು ಬಿಡುಗಡೆ ಹಿನ್ನಲೆ ನೀರಿಗಾಗಿ ಮದ್ದೂರಿನ ಟಿಬಿ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಬುಧವಾರ ರೈತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾಲ್ಕು ಅಣೆಕಟ್ಟೆಗಳಿಂದ ಈಗಾಗಲೇ 80 ಸಾವಿರ ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿದು ಹೋಗಿದೆ. ತಮಿಳುನಾಡಿಗೆ ಸೇರಬೇಕಾದ ನೀರು ಈಗಾಗಲೇ ಸೇರಿದರೂ ಕೂಡ ಸುಪ್ರೀಂಕೋರ್ಟ್ ಆಜ್ಞೆಯಂತೆ ಮತ್ತೆ 11 ಸಾವಿರ ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಬಿಟ್ಟಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಕಾಲುವೆಗಳಿಗೆ ಕೇವಲ 2 ಸಾವಿರ ಕ್ಯೂಸೆಕ್ಸ್ ನೀರನ್ನು ಬಿಟ್ಟಿದ್ದು, ನೀರು ಇನ್ನೂ ನಾಲೆಗಳಿಗೆ ತಲುಪಿಲ್ಲ. ಈ ಕೂಡಲೇ ತಮಿಳುನಾಡಿಗೆ ನೀರನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಉಗ್ರಹೋರಾಟ ಮಾಡುವುದಾಗಿ ರೈತರು ಎಚ್ಚರಿಕೆ ನೀಡಿದರು.