ಸುದ್ದಿಮೂಲ ವಾರ್ತೆ
ಮೈಸೂರು, ಜೂ.16: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ವಿರೋಧಿ, ಜನ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ಶುಕ್ರವಾರ ರೈತರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ರೈತ ಪರವಾಗಿ ಸುಧಾರಣೆಗಳನ್ನು ತರಬೇಕಾದ ಸರ್ಕಾರ, ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲವಾಗುವಂತೆ ಕಾಯ್ದೆಗಳಿಗೆ ತಿದ್ದುಪಡಿಗಳನ್ನು ತರಲಾಗಿತ್ತು.
ಭೂಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ, ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಹೈನುಗಾರಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಈ ಮೂರು ಕಾಯ್ದೆಗಳು ರೈತ ಸಮುದಾಯಕ್ಕೆ ಮಾತ್ರವಲ್ಲ, ಇಡೀ ಸಮಾಜಕ್ಕೆ ಮಾರಕ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿರು.
ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ಬಿಜೆಪಿ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ‘ಉಳುವವನೇ ಭೂಮಿ ಒಡೆಯ’ ಎಂಬ ಮಹತ್ವಾಕಾಂಕ್ಷೆಯ ಉದ್ದೇಶಕ್ಕೆ ಕೊಡಲಿಪೆಟ್ಟು ನೀಡಿದೆ. ‘ಉಳ್ಳವನೇ ಭೂ ಒಡೆಯ’ ಎಂಬಂತೆ ಮಾಡಿದೆ ಎಂದು ಕಿಡಿಕಾರಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್ ಮಾತನಾಡಿ, ಈ ಹಿಂದೆ ಇದ್ದ ಸರ್ಕಾರ ಬದ್ಧತೆಯಿಲ್ಲದೆ ಏಕಾಏಕಿ ರೈತ ವಿರೋಧಿ ಕಾಯ್ದೆಗಳನ್ನು ತಂದು ಕಾರ್ಪೊರೇಟ್ ಉದ್ದಾರಕ್ಕೆ ಮಣೆ ಹಾಕಿತ್ತು. ಜನಪರ ಕೆಲಸಕ್ಕೆ ಮುಂದಾಗಿರಲಿಲ್ಲ. ರೈತ ವಿರೋಧಿ ಸರ್ಕಾರಗಳು ರಾಜ್ಯದ ಇತಿಹಾಸದಲ್ಲಿ ಉಳಿದ ಇತಿಹಾಸವೇ ಇಲ್ಲ ಎಂದು ಟೀಕಿಸಿದರು.
ಹಕ್ಕೋತ್ತಾಯಗಳು ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ 2022 ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿಗೆ ತರುವುದಿಲ್ಲವೆಂದು ಮುಂಬರುವ ಅಧಿವೇಶನದಲ್ಲ ತೀರ್ಮಾನಿಸಬೇಕು ಮತ್ತು 10 ಹೆಚ್ ಪಿ ಕೃಷಿ ಪಂಪ್ ಸೆಟ್ ಗಳಿಗೆ ಉಚಿತವಾಗಿ ಗುಣಾತ್ಮಕ ವಿದ್ಯುತ್ ಸರಬರಾಜು ಮಾಡುವ ಬದ್ಧತೆಯನ್ನು ಉಳಿಸಿಕೊಳ್ಳಬೇಕು. ಕೃಷಿ ವಿದ್ಯುತ್ ಮೀಟರ್ಗಳಿಗೆ ಆಧಾರ್ ಜೋಡಣೆ ಮಾಡುವುದನ್ನು ತಡೆಹಿಡಿಯಬೇಕು.
ಕೆ.ಇ.ಆರ್. ಸಿ ಅವೈಜ್ಞಾನಿಕವಾಗಿ ವಿದ್ಯುತ್ ದರವನ್ನು ಹೆಚ್ಚಿಸಿದ್ದು ಅದನ್ನು ಸಾಮಾನ್ಯ ಜನರಿಗೆ ಅನುಕೂಲ ಮಾಡಿಕೊಡಬೇಕು.