ಸುದ್ದಿಮೂಲ ವಾರ್ತೆ
ಬೆಂಗಳೂರು, ನ.8: ಗೃಹಲಕ್ಷ್ಮಿ ಯೋಜನೆ ಈಗಾಗಲೇ ಶೇ.95ರಷ್ಟು ಮನೆಯ ಒಡತಿಯರಿಗೆ ತಲುಪಿದೆ. ತಾಂತ್ರಿಕ ಸಮಸ್ಯೆಯಿಂದ ಕೆಲವರಿಗೆ ಹಣ ತಲುಪುವುದು ವಿಳಂಬವಾಗುತ್ತಿದ್ದು, ಈ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಂಗಳೂರಿನ ಜಲಮಂಡಳಿ ಕಚೇರಿಯಲ್ಲಿರುವ ಬೆಂಗಳೂರು ಒನ್ ಕೇಂದ್ರದಲ್ಲಿ ನಡೆಯುತ್ತಿರುವ ಗೃಹಲಕ್ಷ್ಮಿ ಯೋಜನೆಯಡಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ತರಬೇತಿ ಕುರಿತು ಸಚಿವರು ಮಾಹಿತಿ ಪಡೆದು ಕೊಂಡರು. ಗೃಹಲಕ್ಷ್ಮಿ ಯೋಜನೆ ಕುರಿತು ಆಗಿರುವ ತಾಂತ್ರಿಕ ದೋಷಗಳನ್ನು ಶೀಘ್ರವೇ ಬಗೆಹರಿಸಬೇಕೆಂದು ಸಿಡಿಪಿಒಗಳಿಗೆ ಸೂಚನೆ ನೀಡಿದರು. ತಾಂತ್ರಿಕ ದೋಷ, ಸಿಬ್ಬಂದಿಗಳ ತೊಡಕಿನ ಕುರಿತು ಪರಿಶೀಲನೆ ನಡೆಸಿದರು.
ಶೇಕಡ 95 ರಷ್ಟು ಯಶಸ್ವಿ
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಗೃಹಲಕ್ಷ್ಮಿ ಯೋಜನೆ ಇದುವರೆಗೂ ಶೇಕಡ 95 ರಷ್ಟು ಯಶಸ್ವಿಯಾಗಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಪ್ರತಿದಿನ ಮೂರು ಜಿಲ್ಲೆಗಳ ಸಿಡಿಪಿಒಗಳಿಗೆ ತರಬೇತಿ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಗೆ ಇದುವರೆಗೂ 1 ಕೋಟಿ 16 ಲಕ್ಷದ 65 ಸಾವಿರ ಮಹಿಳೆಯರು ನೋಂದಣಿ ಮಾಡಿಸಿದ್ದಾರೆ. ಈ ಪೈಕಿ ಆಗಸ್ಟ್ ನಲ್ಲಿ ಗೃಹಲಕ್ಷ್ಮಿ ಯರ ಆಕೌಂಟ್ಗೆ – 2 ಸಾವಿರದ 119 ಕೋಟಿ ಹಣ ಹಾಕಲಾಗಿದ್ದು, ಈ ಮೂಲಕ ಶೇಕಡ 97ರಷ್ಟು ಡಿಬಿಟಿ ಮುಖಾಂತರ ಹಣ ಹಾಕಲಾಗಿದೆ ಎಂದು ಸಚಿವರು ವಿವರಿಸಿದರು. ಆಗಸ್ಟ್ ತಿಂಗಳಲ್ಲಿ ಐದು ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಹಣ ಹೋಗಿಲ್ಲ. ಸೆಪ್ಟೆಂಬರ್ನಲ್ಲಿ 82% ಕುಟುಂಬಗಳಿಗೆ ಹಣ ಹಾಕಲಾಗಿದ್ದು 12 ಲಕ್ಷ ಕುಟುಂಬಗಳಿಗೆ ತಾಂತ್ರಿಕ ದೋಷದಿಂದ ಅಥವಾ ಕೆವೈಸಿ ಸಮಸ್ಯೆಯಿಂದ ಹಣ ಬ್ಯಾಂಕ್ ಆಕೌಂಟ್ ನಲ್ಲಿ ಉಳಿದಿದೆ. ಇನ್ನು
ಅಕ್ಟೋಬರ್ನಲ್ಲಿ 2400 ಕೋಟಿ ರೂ ಬಿಡುಗಡೆಯಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ದೀಪಾವಳಿ ವೇಳೆಗೆ ಶೇಕಡ 100ರಷ್ಟು ಗುರಿ:
ಆಗಸ್ಟ್ 15 ರೊಳಗೆ ನೋಂದಣಿ ಮಾಡಿಕೊಂಡವರಿಗೆ ಇದುವರೆಗೆ ದುಡ್ಡು ಬಾರದೇ ಇದ್ದರೆ, ಒಟ್ಟಿಗೆ ಮೂರು ತಿಂಗಳ ಹಣ ಹಾಕಲಾಗುತ್ತದೆ. ಇದುವರೆಗೆ ಹಣ ಬಾರದೇ ಇದ್ದರೂ ಪೂರ್ಣ ಬಾಕಿ ಹಣ ಹಾಕಲಾಗುವುದು. ದೀಪಾವಳಿ ಹಬ್ಬದ ವೇಳೆಗೆ ಎಲ್ಲಾ ಫಲಾನುಭವಿಗಳಿಗೆ ಹಣ ಹೋಗುವಂತೆ ನೋಡಿಕೊಳ್ಳಲಾಗುವುದು. ಹೀಗಾಗಿ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಇನ್ನು ಹತ್ತು ದಿನದಲ್ಲಿ ಗೃಹಲಕ್ಷ್ಮಿ ಗೊಂದಲ ಬಗೆಹರಿಯಲಿದೆ ಎಂದು ಹೇಳಿದರು.
ಈ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ನಿರ್ದೇಶಕರಾದ ಎಂ.ಎಸ್.ಅರ್ಚನಾ, ಇ-ಗವರ್ನೆನ್ಸ್ ಇಲಾಖೆಯ ನಿರ್ದೇಶಕ ದಿಲೀಶ್ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಯಾವ ಸಮಸ್ಯೆಯೂ ಇಲ್ಲ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಬೆಳಗಾವಿ ರಾಜಕೀಯ ಸಮಸ್ಯೆಗಳು ಮುಗಿಯಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ ಎಂದು ಮಾಧ್ಯಮದವರು ಕೇಳಿದಾಗ, ಸತೀಶ್ ಜಾರಕಿಹೊಳಿ ಅವರು ಹಾಗೆ ಹೇಳೋಕೆ ಸಾದ್ಯವೇ ಇಲ್ಲ. ಕಥೆಯೇ ಇಲ್ಲ ಮುಗಿಯೋದು ಏನಿದೆ? ಎಂದು ಪ್ರಶ್ನಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ನಾನು ಗಮನಿಲ್ಲ. ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ಯಾವುದೇ ಸಮಸ್ಯೆಯೂ ಇಲ್ಲ. ನನ್ನ ಜೊತೆಯೂ ಯಾವ ಸಮಸ್ಯೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.