ಸುದ್ದಿಮೂಲ ವಾರ್ತೆ
ಹಾಸನ, ನ.2 : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಇಲ್ಲಿನ ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಬುಧವಾರ ಶಾಸ್ತ್ರೋಕ್ತವಾಗಿ ತೆರೆಯಲಾಯಿತು. ಗುರುವಾರದಿಂದ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಪೂಜಾ ಕೈಂಕರ್ಯದ ಮೂಲಕ ಹಾಸನ ಜಿಲ್ಲಾ ಉಸ್ತುವಾರಿ ಕೆ ಎನ್ ರಾಜಣ್ಣ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಹಾಸನಾಂಬ ದೇವಸ್ಥಾನದ ಗರ್ಭಗುಡಿಯ ಬಾಗಿಲನ್ನು ತೆರೆಯಲಾಯಿತು. ಮಧ್ಯಾಹ್ನ 12.23 ರಲ್ಲಿ ಹಾಸನಾಂಬಾ ದೇಗುಲ ಹೊರಗೆ ಕದಳಿ ಕಡಿಯುತ್ತಲೇ ದೇವಾಯಲಯದ ಗರ್ಭಗುಡಿ ಬಾಗಿಲು ತೆರೆಯಲಾಯಿತು.
ಗರ್ಭಗುಡಿಯ ಬಾಗಿಲು ತೆರೆದ ಮೊದಲ ಮತ್ತು ಅಂತಿಮ ದಿನ ಸಾರ್ವಜನಿಕ ದರ್ಶನ ಇರುವುದಿಲ್ಲ. ನಾಳೆಯಿಂದ ಹಾಸನಾಂಬ ದೇವಿಯ ದರ್ಶನ ಪಡೆಯಲು ಭಕ್ತರಿಗೆ ಅವಕಾಶವಿದ್ದು, ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ ಉಳಿದ 12 ದಿನಗಳ ವರೆಗೆ ಹಾಸನಾಂಬ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 6 ರಿಂದ ಹಾಸನಾಂಬೆ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಹಾಸನಾಂಬ ದರ್ಶನ ಪಡೆಯಲು ಹಾಸನ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಪ್ರತಿವರ್ಷ ಗರ್ಭಗುಡಿ ಬಾಗಿಲು ಹಾಕುವ ಸಂದರ್ಭದಲ್ಲಿ ಹಚ್ಚಿದ ಹಣತೆ, ಇಟ್ಟ ನೈವೇದ್ಯ ಹಾಗೂ ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ.
ಈ ಸಂದರ್ಭದಲ್ಲಿ ಶಾಸಕ ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಮತ್ತಿತರರು ಇದ್ದರು.
ಸಂಸದ ಕಡೆಗಣನೆ
ಹಾಸನಾಂಬೆಯ ಜಾತ್ರಾ ಮಹೋತ್ಸವಕ್ಕೆ ರಾಜಬೀದಿಗಳಲ್ಲಿ ಜಿಲ್ಲಾಡಳಿತದಿದಂ ಹಾಕಿರುವ ಫ್ಲೆಕ್ಸ್ಗಳಲ್ಲಿ ಸಂಸದ ಪ್ರಜ್ವಲ್ ರೇವಣ್ಣನವರ ಭಾವಚಿತ್ರ ಹಾಕದೇ ಜಿಲ್ಲಾಡಳಿತ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಿದ್ದು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಭಾವಚಿತ್ರವನ್ನು ಮಾತ್ರ ಹಾಕಲಾಗಿದೆ. ದುರುದ್ದೇಶ ಮತ್ತು ರಾಜಕೀಯ ಕಾರಣಕ್ಕಾಗಿ ಮಾಡಲಾಗಿದೆ ಎಂದು ಜೆಡಿಎಸ್ ನಗರಸಭಾ ಸದಸ್ಯ ಎಸ್.ಎಚ್. ವಾಸದೇವ್ ಖಂಡಿಸಿದ್ದಾರೆ.