ಸುದ್ದಿಮೂಲ ವಾರ್ತೆ
ಕುಷ್ಟಗಿ, ಸೆ.15:ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ಶುಕ್ರವಾರ ಸಾರ್ವಜನಿಕವಾಗಿ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ.
ಇಲ್ಲಿನ ತಾಲೂಕಾ ಕ್ರೀಡಾಂಗಣದಲ್ಲಿ ತಾಲೂಕಾಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರುಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಏಕಕಾಲಕ್ಕೆ ಸುಮಾರು 2000ಕ್ಕೂ ಹೆಚ್ಚು ನಾಗರಿಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ್, ತಾಲೂಕು ಪಂಚಾಯಿತಿ ಇಓ ಶಿವಪ್ಪ ಸುಬೇದಾರ, ಸಿಪಿಐ ಯಶವಂತ ಬಿಸನಹಳ್ಳಿ, ಸಿಡಿಪಿಒ ಯಲ್ಲಮ್ಮ ಹಂಡಿ, ಪುರಸಭೆ ಮುಖ್ಯಾಧಿಕಾರಿ ಧರಣೇಂದ್ರಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬಳೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಗೌರವ ಸಲ್ಲಿಸಿದರು.
ಬಳಿಕ ತಹಸೀಲ್ದಾರ್ ಶೃತಿ ಮಳ್ಳಪ್ಪಗೌಡರ್ ಅವರು ಸರ್ವರಿಗೂ ಏಕಕಾಲಕ್ಕೆ ಸಂವಿಧಾನ ಪೀಠಿಕೆ ಬೋಧಿಸಿದರು. ಕ್ರೀಡಾಂಗಣದಲ್ಲಿ ಸಮಾವೇಶಗೊಂಡಿದ್ದ ನಾಗರಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಮುಖ್ಯೋಪಾಧ್ಯಾಯರು, ಪ್ರಾಚಾರ್ಯರು, ಅಂಗನವಾಡಿ ಕಾರ್ಯಕರ್ತೆಯರು, ಕಂದಾಯ ಇಲಾಖೆ ಸಿಬ್ಬಂದಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಸಂಭ್ರಮಕ್ಕೆ ಸಾಕ್ಷಿಯಾದರು.
ದೈಹಿಕ ಶಿಕ್ಷಣ ಪರಿವೀಕ್ಷಕ ನಾಗಪ್ಪ ಬಿಳಿಯಪ್ಪನವರ ಹಾಗೂ ಡಾ.ಜೀವನಸಾಬ ಬಿನ್ನಾಳ ಅವರು ಕಾರ್ಯಕ್ರಮ ನಿರ್ವಹಿಸಿದರು.