ಸುದ್ದಿಮೂಲ ವಾರ್ತೆ
ಬೆಂಗಳೂರು, ಮಾ.30: ರಾಜ್ಯ ವಿಧಾನಸಭೆಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಈಗಾಗಲೇ ವೇಳಾಪಟ್ಟಿ ಪ್ರಕಟವಾಗಿದೆ. ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿವಿಧ ಕಚೇರಿಗಳು, ಸಾರ್ವಜನಿಕ ಪ್ರದೇಶಗಳಲ್ಲಿ ಮುಖ್ಯಮಂತ್ರಿ, ಸಚಿವರ ಫೋಟೋ ತೆಗೆದುಹಾಕುವಂತೆ ಸೂಚಿಸಲಾಗಿದೆ.
ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರು ಈಗಾಗಲೇ ಈ ಸಂಬಂಧ ನಿರ್ದೇಶನ ನೀಡಿದ್ದು, ಭಾವಚಿತ್ರಗಳನ್ನು ತೆಗೆಯುವ ಕಾರ್ಯ ಪ್ರಗತಿಯಲ್ಲಿದೆ.
ಸಾರಿಗೆ ವಾಹನಗಳು, ಕಚೇರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಒಳಪಡುವ ಸಾರ್ವಜನಿಕ ಆರೋಗ್ಯ ಕೇಂದ್ರಗಳು, ಜನೌಷಧಿ ಕೇಂದ್ರಗಳು ಮತ್ತಿತರೆ ಕಚೇರಿಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳು, ಸಚಿವರು ಮತ್ತು ರಾಜಕೀಯ ನಾಯಕರುಗಳ ಛಾಯಾಚಿತ್ರಗಳನ್ನು ಕೂಡಲೇ ತೆಗೆಯುವಂತೆ ಸೂಚಿಸಲಾಗಿದೆ. ಮಾದರಿ ನೀತಿ ಸಂಹಿತೆಯನ್ನು ಕಡ್ಡಾಯವಾಗಿ ಪರಿಪಾಲಿಸುವಂತೆ ನಿರ್ದೇಶನ ನೀಡಲಾಗಿದೆ.