ಸುದ್ದಿಮೂಲ ವಾರ್ತೆ
ತುಮಕೂರು, ಅ.19 : ಸಾಂತ್ವನ ಕೇಂದ್ರಗಳಲ್ಲಿ ಸಿಬ್ಬಂದಿಗಳು ಕಡ್ಡಾಯವಾಗಿ ದಿನದ 24 ಗಂಟೆ
ಕಾರ್ಯನಿರ್ವಹಿಸುವಂತೆ ಹಾಗೂ ಸಾಂತ್ವನ ಕೇಂದ್ರಗಳ ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ವ್ಯಾಪಕ ಪ್ರಚಾರ ಮಾಡಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.
ನಗರದ ಬಾಲಭವನದದಲ್ಲಿ ಮಂಗಳವಾರ ನಡೆದ ಜಿಲ್ಲಾ ಬಾಲಭವನ ಸಮಿತಿ ಸಭೆ ಹಾಗೂ 2ನೇ ತ್ರೈಮಾಸಿಕದ ಸಾಂತ್ವನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾ ಬಾಲಭವನದ ಅಭಿವೃದ್ಧಿಗೆ ಪೂರಕವಾದ ಹಲವು ಕಾಮಗಾರಿಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಅಲ್ಲದೇ, ಜಿಲ್ಲಾ ಬಾಲಭವನದಿಂದ ಜಿಲ್ಲೆಯ ತಾಲ್ಲೂಕುಗಳ ನಗರ ಮತ್ತು ಗ್ರಾಮೀಣ ಮಕ್ಕಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ, ಚಟುವಟಿಕೆಗಳನ್ನು ಆಯೋಜಿಸುವ ಸಂಬಂಧ ಕ್ರಯಾ ಯೋಜನೆಯನ್ನು ಸಿದ್ದಪಡಿಸಲು ಸೂಚಿಸಿದರು.
ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಣಿಕೆ ತಡೆಕಾಯ್ದೆಯಡಿ ಮಕ್ಕಳ ಗ್ರಾಮಸಭೆಗಳಲ್ಲಿ ಕಡ್ಡಾಯವಾಗಿ ಮಕ್ಕಳು ಹಾಜರಿರಲು ಅಗತ್ಯ ಕ್ರಮವಹಿಸಬೇಕು. ಈ ಸಂದರ್ಭಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟದ ಬಗ್ಗೆ ಅರಿವು ಮೂಡಿಸುವಂತೆ ಹಾಗೂ ಇಂತಹ
ಮಕ್ಕಳ ಸಮಸ್ಯೆಗಳನ್ನು ಆಲಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.
ಜಿಲ್ಲೆಯಲ್ಲಿನ 4 ಶಿಶುಪಾಲನಾ ಕೇಂದ್ರಗಳ ಕಾರ್ಯನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ಯಾವುದೇ ರೀತಿಯವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಸೂಚಿಸಿದರು.
ಈ ಸಂದರ್ಭ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರುಗಳು ಹಾಜರಿದ್ದರು.