ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 2: ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ಬೇಷರತ್ ಬೆಂಬಲ ನೀಡಿತ್ತು. ಆದರೆ ಕುಮಾರಸ್ವಾಮಿ ಅವರು ಅಧಿಕಾರ ಉಳಿಸಿಕೊಳ್ಳಲಿಲ್ಲ. ಮುಂದಿನ ಬಾರಿ ಜೆಡಿಎಸ್ ಹಾಗೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಮುಳಬಾಗಿಲಿನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ ಎಂದು ಹೇಳಿದರು.
ರೈತನಿಗೆ ಸಂಬಳ, ಬಡ್ತಿ, ನಿವೃತ್ತಿ, ಪಿಂಚಣಿ, ಲಂಚ ಯಾವುದೂ ಇಲ್ಲ. ರೈತರ ಹಿತ ಕಾಯಲು ಕಾಂಗ್ರೆಸ್ ಸರ್ಕಾರ ವಿಶೇಷ ಯೋಜನೆ ರೂಪಿಸಿದೆ. ಕಾಂಗ್ರೆಸ್ ಪಕ್ಷ ಜನರಿಗೆ ನೆರವಾಗಲು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಇವು ನಮ್ಮ ಐದು ಗ್ಯಾರಂಟಿ ಯೋಜನೆಗಳು. ಈ ಎಲ್ಲಾ ಯೋಜನೆಗಳನ್ನು ಸರ್ಕಾರ ಬಂದ ಮೊದಲ ಸಚಿವ ಸಂಪುಟದಲ್ಲೇ ಜಾರಿ ಮಾಡಲಾಗುವುದು.
ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಹೀಗಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಜೆಡಿಎಸ್ ಹಾಗೂ ಬಿಜೆಪಿಯಿಂದ ಅನೇಕ ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರವನ್ನು ಜನ ಬಯಸಿದ್ದಾರೆ. ನಿಮ್ಮ ಪ್ರೀತಿ ವಿಶ್ವಾಸ ಬೇಕು. ಇಲ್ಲಿ ಶಿವಕುಮಾರ್ ಅಭ್ಯರ್ಥಿ ಎಂದು ನೀವು ಹಸ್ತದ ಗುರುತಿಗೆ ಮತ ಹಾಕಬೇಕು. ಪಕ್ಷದ ಎಲ್ಲಾ ಕಾರ್ಯಕರ್ತರು ಗ್ಯಾರಂಟಿ ಕಾರ್ಡ್ಗಳನ್ನು ಮನೆ ಮನೆಗೆ ತಲುಪಿಸಿ ಎಂದು ಹೇಳಿದರು.