ಸುದ್ದಿಮೂಲ ವಾರ್ತೆ
ಬೆಂಗಳೂರು, ಜು. 20: ರಾಜ್ಯದಲ್ಲಿ ಕೊಬ್ಬರಿಯನ್ನು ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರವು ಹೊಸದಾಗಿ ರೈತರಿಗೆ ನೋಂದಣಿ ಮಾಡಿಸಲು ಅವಕಾಶ ನೀಡಬೇಕು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಒತ್ತಾಯಿಸಿದರು.
ವಿಧಾನಸೌಧದಲ್ಲಿಂದು ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಾಫೆಡ್ ಸಂಸ್ಥೆಯಿಂದ ರಾಜ್ಯದ 28 ಕೇಂದ್ರಗಳಲ್ಲಿ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮೂಲಕ ಕೊಬ್ಬರಿಯನ್ನು ಬೆಂಬಲ ಬೆಲೆ ಅಡಿಯಲ್ಲಿ ಕೇಂದ್ರ ಸರ್ಕಾರ ಖರೀದಿಸುತ್ತಿದ್ದು, ಇದುವರೆಗೂ 37,627 ರೈತರು ನೋಂದಣಿ ಮಾಡಿಕೊಂಡಿದ್ದು, ಈ ರೈತರಿಂದ ಸುಮಾರು 47 ಸಾವಿರ ಮೆಟ್ರಿಕ್ ಟನ್ ಕೊಬ್ಬರಿ ಖರೀದಿಸಲಾಗಿದೆ. ಕೊಬ್ಬರಿ ಖರೀದಿಗೆ ಈ ತಿಂಗಳ 26 ಕೊನೆಯ ದಿನಾಂಕವಾಗಿದ್ದು, ಇದನ್ನು ವಿಸ್ತರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದ ಹಿನ್ನೆಲೆಯಲ್ಲಿ ಒಂದು ತಿಂಗಳು ಅವಧಿ ವಿಸ್ತರಿಸಲಾಗಿದೆ.
ಆದರೆ ಹೊಸ ನೋಂದಣಿಗೆ ಅವಕಾಶ ಕಲ್ಪಿಸಿಲ್ಲ. ಇದರಿಂದ ರೈತರು ಬೆಂಬಲ ಬೆಲೆ ಅಡಿ ಕೊಬ್ಬರಿ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಲು ಅಡ್ಡಿಯಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಖರೀದಿ ಪ್ರಕ್ರಿಯೆಯನ್ನು ಇನ್ನು 3 ತಿಂಗಳು ವಿಸ್ತರಿಸಿ, ಹೊಸ ರೈತರ ನೋಂದಣಿಗೂ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ 11,750 ರೂಪಾಯಿ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ.ರಾಜ್ಯ ಸರ್ಕಾರ 1250 ರೂ. ಪ್ರತಿ ಕ್ವಿಂಟಾಲ್ಗೆ ಪ್ರೋತ್ಸಾಹ ಧನ ನೀಡುತ್ತಿದೆ. ಇದರ ಲಾಭ ರೈತರಿಗೆ ಸಿಗುವಂತಾಗಲು ಹೊಸ ನೋಂದಣಿಗೆ ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯದ ಕೊಬ್ಬರಿ ಬೆಳೆಗಾರರ ನೆರವಿಗೆ ಬಂದು ಅವಧಿ ವಿಸ್ತರಿಸಿ ಹೊಸ ರೈತರ ನೋಂದಣಿಗೂ ಅವಕಾಶ ಕೊಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಸಂಬಂಧ ಕೇಂದ್ರದ ಕೃಷಿ ಸಚಿವೆ ಶೋಭ ಕರಂದ್ಲಾಜೆ ಸೇರಿದಂತೆ ಎಲ್ಲ ಕೇಂದ್ರ ಸಚಿವರಿಗೆ ಹಾಗೂ ಸಂಸದರಿಗೂ ಪತ್ರ ಬರೆಯುವುದಾಗಿ ಸಚಿವ ಶಿವಾನಂದ ಪಾಟೀಲ್ ಹೇಳಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಇ. ಯಶವಂತ್ ಅವರು, ರಾಜ್ಯ ಸರ್ಕಾರ ಕೊಬ್ಬರಿಗೆ ಪ್ರತಿ ಕ್ವಿಂಟಾಲ್ಗೆ 1250 ಪ್ರೋತ್ಸಾಹ ಧನ ಘೋಷಿಸಿದೆ. ಇದು ರೈತರಿಗೆ ಸಿಗಬೇಕು ಎಂದರೆ ಹೊಸ ರೈತರ ನೋಂದಣಿಗೆ ಅವಕಾಶ ಮಾಡಿಕೊಡಬೇಕು. ಹಾಗಾಗಿ ರಾಜ್ಯ ಸರ್ಕಾರ ಸಹ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಅಗತ್ಯ ಬಿದ್ದರೆ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಧರಣಿ ನಡೆಸಿದರೂ ತಪ್ಪೇನಲ್ಲ ಎಂದರು.
ಕರ್ನಾಟಕ ಪ್ರಾಂತ ರೈತ ಸಂಘ ಈಗಾಗಲೇ ಎಲ್ಲ ಸಂಸದರ ಮನೆ ಮುಂದೆ ಧರಣಿ ನಡೆಸಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿದೆ. ಕೇಂದ್ರ ಸರ್ಕಾರ ಕೂಡಲೇ ಹೊಸ ನೋಂದಣಿಗೆ ಅವಕಾಶ ನೀಡಬೇಕು. ಬೆಲೆ ಕುಸಿತದಿಂದ ಕಂಗೆಟ್ಟಿರುವ ತೆಂಗು ಬೆಳೆಗಾರರ ನೆರವಿಗೆ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು.