ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.2: ಕೆಎಸ್ಐಡಿಎಲ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಏ.11ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಐದು ದಿನಗಳಿಂದ ಪೊಲೀಸ್ ವಶದಲ್ಲಿರುವ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಶನಿವಾರ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆದೇಶ ನೀಡಿದೆ. ಏ.6ರಂದು ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ. ಜತೆಗೆ, ಅದೇ ದಿನ ಆಕ್ಷೇಪಣೆ ಅರ್ಜಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.
ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ತಿರಸ್ಕೃತಗೊಂಡ ಬಳಿಕ ವಿರೂಪಾಕ್ಷಪ್ಪ ಅವರನ್ನು ಮಾ.28ರಂದು ಲೋಕಾಯುಕ್ತ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಏ.2ರವರೆಗೆ ಅವರನ್ನು ಪೊಲೀಸ್ ವಶಕ್ಕೆ ನೀಡಲಾಗಿತ್ತು.
ವಿರೂಪಾಕ್ಷಪ್ಪ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ನೀಡಿದ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಈ ವೇಳೆ, ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ವಿರೂಪಾಕ್ಷಪ್ಪ ಅಧಿಕಾರಿಗಳ ಬಳಿ ಮಾಹಿತಿ ನೀಡಿದ್ದಾರೆ.