ಸುದ್ದಿಮೂಲವಾರ್ತೆ ಮಾನ್ವಿ ಏ-15
ಮಾನ್ವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಪಡೆಯಲು ಮಾಜಿ ಶಾಸಕ ಹಂಪಯ್ಯ ನಾಯಕ ಕೊನೆಗೂ ಯಶಸ್ವಿಯಾಗಿದ್ದಾರೆ.
2008 ಮತ್ತು 2013 ರಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿ 2018 ರ ಚುನಾವಣೆಯಲ್ಲಿ 28,177 ಮತಗಳನ್ನು ಪಡೆಯುವ ಮೂಲಕ ನಾಲ್ಕನೇ ಸ್ಥಾನ ಪಡೆದು ಸೋತು ಸುಣ್ಣಾಗಿದ್ದ ಮಾಜಿ ಶಾಸಕ ಹಂಪಯ್ಯ ನಾಯಕ 2023 ರ ಚುನಾವಣೆಯಲ್ಲಿ ಮಾನ್ವಿ ಕ್ಷೇತ್ರಕ್ಕೆ ಮಾಜಿ ಸಂಸದ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ವಿ.ನಾಯಕ ಬಂದರೆ ಸುಣ್ಣದ ನೀರು ಕುಡಿಸುತ್ತೇನೆಂದು ಘರ್ಜಿಸುವ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬದಲಾದ ರಾಜಕೀಯ ಬೆಳವಣಿಗೆಯಲ್ಲಿ ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜು ಅವರಿಗೆ ರಾಯಚೂರು ನಗರ ಕ್ಷೇತ್ರದ ಟಿಕೆಟ್ ಕೈ ತಪ್ಪುವ ಸೂಚನೆ ಮೇರೆಗೆ ಅದೃಷ್ಟವೆಂಬಂತೆ ಹಂಪಯ್ಯ ನಾಯಕ ಅವರಿಗೆ ಮಾನ್ವಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ ಎಂದು ಹೇಳಲಾಗುತ್ತಿದೆ.
ತಮಗೆ ಟಿಕೆಟ್ ಕೈ ತಪ್ಪುತ್ತದೆ ಎಂಬ ಸೂಚನೆ ಅರಿತ ಹಂಪಯ್ಯ ನಾಯಕ ಮಾನ್ವಿ ಮತ್ತು ಸಿರವಾರದಲ್ಲಿ ಪ್ರತ್ಯೇಕ ತಮ್ಮ ಬೆಂಬಲಿಗರ ಸಭೆ ನಡೆಸಿ ಸ್ಥಳೀಯರಿಗೆ ಟಿಕೆಟ್ ಕೊಡಬೇಕು ಎನ್ನುವ ಒತ್ತಾಯದ ಮೇರೆಗೆ ಕೊನೆಗೂ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.