ಬೆಂಗಳೂರು, ಜ.13: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಅವರ ನೇತೃತ್ವದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆ ಕುರಿತು ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಅಲ್ಪಸಂಖ್ಯಾತ ನಾಯಕರ ಸಭೆ ಶುಕ್ರವಾರ ನಡೆಯಿತು.
ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು, ಅಲ್ಪಸಂಖ್ಯಾತರ ಬೆಂಬಲವನ್ನು ಕಾಂಗ್ರೆಸ್ ಪಕ್ಷಕ್ಕೆ ಪಡೆಯುವ ಸಂಬಂಧ ಸಭೆಯಲ್ಲಿ ಚರ್ಚಿಸಲಾಯಿತು.
ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ನೀಡಲಾದ ಸೌಲಭ್ಯಗಳ ಕುರಿತು ಜನರಲ್ಲಿ ಅರಿವು ಮೂಡಿಸಬೇಕು. ಅಲ್ಲದೆ, ಈಗಿನ ಬಿಜೆಪಿ ಸರ್ಕಾರ ಮುಸ್ಲಿಮರಿಗೆ ಮಾಡಿದ ಅನ್ಯಾಯಗಳನ್ನು ಸಮುದಾಯಕ್ಕೆ ತಲುಪಿಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಭೆಯಲ್ಲಿ ಕೆಪಿಸಿಸಿ ಶಿಸ್ತು ಸಮಿತಿ ಮುಖ್ಯಸ್ಥರಾದ ರೆಹಮಾನ್ ಖಾನ್, ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು.ಟಿ ಖಾದರ್, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್, ತನ್ವೀರ್ ಸೇಠ್, ವಿಧಾನ ಪರಿಷತ್ ಸದಸ್ಯ ನಸೀರ್ ಅಹಮದ್, ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್, ಕೆಪಿಸಿಸಿ ಮಾಧ್ಯಮ ವಿಭಾಗದ ಸಹ ಅಧ್ಯಕ್ಷರಾದ ಮನ್ಸೂರ್ ಅಲಿ ಖಾನ್, ಶಾಸಕ ರಿಜ್ವಾನ್ ಅರ್ಷದ್, ಮೆಹರೋಜ್ ಖಾನ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.