ಸುದ್ದಿಮೂಲ ವಾರ್ತೆ,
ಮೈಸೂರು, ಮೇ 29: ನನಗೀಗ ನೀಡಿರುವ ಖಾತೆಯ ಬಗ್ಗೆ ಯಾವುದೇ ಬೇಸರವಿಲ್ಲ. ನಮ್ಮ ಸಚಿವ ಸಂಪುಟ ಒಗ್ಗಟ್ಟಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಅಷ್ಟೇ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ
ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಕಳೆದ ಮೂರು ವರ್ಷಗಳಿಂದ ಎಸ್ಸಿ ,ಎಸ್ಟಿ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನೇ ನೀಡಿಲ್ಲ.ವಿದ್ಯಾರ್ಥಿಗಳು ಪ್ರವೇಶ ಶುಲ್ಕ ಕಟ್ಟಲು ಪರದಾಡುತ್ತಿದ್ದಾರೆ. ಇದನ್ನು ನಾವು ಮುಂದಿನ ದಿನಗಳಲ್ಲಿ ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಇದೇ ವೇಳೆ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಶೀಘ್ರ ಅನುಷ್ಠಾನಕ್ಕೆ ತುರುವಂತೆ ಒತ್ತಾಯಿಸುತ್ತಿರುವ ಬಿಜೆಪಿ
ನಾಯಕರಿಗೆ ತಿರುಗೇಟು ನೀಡಿದ್ದ ಸಚಿವ ಮಹದೇವಪ್ಪ, 2013 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದನಂತರ
ನೀಡಿದ್ದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇವೆ. ಈಗಲೂ ನಾವು ನೀಡಿರುವ ಎಲ್ಲಾ ಭರವಸೆಗಳನ್ನು
ಈಡೇರಿಸುತ್ತೇವೆ. ಇದಕ್ಕೆ ಸ್ವಲ್ಪ ಕಾಲಾವಕಾಶ ಬೇಕು. ಎಂದು ಸಮರ್ಥಿಸಿಕೊಂಡರು.
ಜುಲೈ ಒಳಗೆ ಮತ್ತೊಮ್ಮೆ ಬಜೆಟ್ ಮಂಡಿಸಿ ಅನುಮೋದನೆ ಪಡೆದುಕೊಳ್ಳಬೇಕು. ಗ್ಯಾರಂಟಿ ಯೋಜನೆ ಜಾರಿಗೆ ರೂಪು ರೇಷೆಗಳನ್ನು ಸಿದ್ದಪಡಿಸಬೇಕು. ಅಷ್ಟರಲ್ಲೇ ಅನುಷ್ಠಾನಗೊಳಿಸಿ ಎಂದು ಆತುರ ತೋರುತ್ತಿರುವ ಬಿಜೆಪಿ ನಾಯಕರ ನಿಲುವು ಸರಿಯಲ್ಲ. ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ನೀಡುವ ಭರವಸೆ ನೀಡಿದ್ದರು. ವಿದೇಶದಲ್ಲಿರುವ ಕಪ್ಪುಹಣ ತಂದು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ಹಣ ಹಾಕುತ್ತೇವೆ ಎಂದಿದ್ಧರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 9 ವರ್ಷವಾಯಿತು. ಹಾಗಾದರೆ 18 ಕೋಟಿ ಉದ್ಯೋಗ ಕೊಟ್ಟಿದ್ದಾರಾ? ಎಷ್ಟು ಜನರ ಖಾತೆಗೆ 15 ಲಕ್ಷ ಹಣ ಹಾಕಿದ್ದಾರೆ? ಎಂದು ಪ್ರಶ್ನಿಸಿದರು.
ವಿದೇಶದಿಂದ ಎಷ್ಟು ಕಪ್ಪು ಹಣ ತಂದಿದ್ದಾರೆ? ಬಿಜೆಪಿಯವರು ಸೋಲಿನ ಹತಾಶೆಯಿಂದ ಹೇಳಿಕೆಗಳನ್ನು
ನೀಡುತ್ತಿದ್ದಾರೆ. ಕೈಲಾಗದವನು ಮೈ ಪರಚಿಕೊಂಡಂತೆ ಬಿಜೆಪಿ ನಾಯಕರು ವರ್ತಿಸುತ್ತಿದ್ದಾರೆಂದು ವಾಗ್ದಾಳಿ ನಡೆಸಿದರು ಸಚಿವ ಮಹದೇವಪ್ಪ.