ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಅ.3: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಹಾಸ್ಟಲ್ ಗಳ ಛಾಯಾಚಿತ್ರಗಳ ಸಮೇತ ಅಂಕಿ ಸಂಖ್ಯೆಗಳನ್ನು ಆದಷ್ಟು ಶೀಘ್ರವಾಗಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಸಿ.ಸುಧಾಕರ್ ಸೂಚಿಸಿದರು.
ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿ ವೇತನವನ್ನು 1600 ರಿಂದ 3100 ರೂ.ಗಳ ವರೆಗೆ ವಿಶೇಷ ಪ್ರೋತ್ಸಾಹಧನ ಮಂಜೂರು ಮಾಡಿದೆ. ಪ್ರತಿ ವರ್ಷ ಈ ಯೋಜನೆಯನ್ನು ಸುಮಾರು 8 ರಿಂದ 9 ಸಾವಿರ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗುತ್ತದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಮೀನುಗಾರಿಕೆ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ 60 ಅರ್ಹ ಫಲಾನುಭವಿಗಳಿಗೆ 10 ಸಾವಿರ ಮೌಲ್ಯದ ಮೀನುಗಾರಿಕೆ ಪರಿಕರಣಗಳನ್ನು ಅಗತ್ಯಕ್ಕೆ ಅನುಗುಣವಾಗಿ ವಿತರಿಸಲು 6 ಲಕ್ಷ ಅನುದಾನವನ್ನು ನಿಗದಿ ಪಡಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
2022-23ರ ವರೆಗೆ 29 ಸಮುದಾಯ ಶೌಚಾಲಯಗಳು ಅನುಮೋದನೆಗೊಂಡಿದ್ದು, ಈ ಪೈಕಿ 26 ಸಮುದಾಯ ಶೌಚಾಲಯಗಳ ನಿರ್ಮಾಣ ಪೂರ್ಣಗೊಂಡಿದೆ. ಉಳಿದಂತೆ 3 ಸಮುದಾಯದ ಶೌಚಾಲಯಗಳ ನಿರ್ಮಾಣ ಕಾರ್ಯ ವಿವಿಧ ಹಂತದಲ್ಲಿದೆಯೆಂದು ಅಧಿಕಾರಿಗಳು ತಿಳಿಸಿದರು.
ವಿಕಲಚೇತನರು ಹಾಗೂ ಹಿರಿಯ ನಾಗರೀಕರಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹಾಗೂ ಜಿಲ್ಲಾ ಶಸ್ರ್ತಚಿಕಿತ್ಸಕರ ಜೊತೆ ಸಮಾಲೋಚನೆ ನಡೆಸಿ ಎಲ್ಲಾ ತಾಲೂಕುಗಳಲ್ಲಿ ಒಂದು ದಿನವನ್ನು ನಿಗದಿಪಡಿಸಿ ಅಂತಹ ದಿನಕ್ಕೆ ಯಾವ ವೈದ್ಯರು ಇರುತ್ತಾರೆ ಎಂಬುದು ಮಾಹಿತಿ ಅವರಿಗೆ ತಿಳಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಶಾಸಕರಾದ ಸುಬ್ಬಾರೆಡ್ಡಿ, ರವಿಕುಮಾರ್, ಕೆ.ಹೆಚ್.ಪುಟ್ಟಸ್ವಾಮಿಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲ್ ಕುಮಾರ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಡಾ.ಎನ್.ಭಾಸ್ಕರ್, ಮುಖ್ಯ ಯೋಜನಾಧಿಕಾರಿ ಧನುರೇಣುಕಾ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.