ಸುದ್ದಿಮೂಲ ವಾರ್ತೆ
ಕೆ.ಆರ್.ಪುರ, ಅ:14: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ಸರಿಯಾದ ಅನುದಾನ ಬಿಡುಗಡೆ ಮಾಡದೇ ತಾರತಮ್ಯ ಮಾಡುತ್ತಿದೆ ಎಂದು ಶಾಸಕಿ ಮಂಜುಳಾ ಲಿಂಬಾವಳಿ ಬೇಸರ ವ್ಯಕ್ತಪಡಿಸಿದರು.
ಕೆ.ಆರ್.ಪುರ ಸಮೀಪದ ರಾಂಪುರದಲ್ಲಿ ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವತಿಯಿಂದ ಹಮ್ಮಿಕೊಂಡಿದ ಗ್ರಾಮ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಹದೇವಪುರ ಕ್ಷೇತ್ರದ ಅಭಿವೃದ್ಧಿಗೆ ಸರಿಯಾದ ಅನುದಾನ ನೀಡುತ್ತಿಲ್ಲದ ಕಾರಣ ನೆನೆಗುದಿಗೆ ಬಿದ್ದಿರುವ ಮತ್ತು ಹೊಸದಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಅನುದಾನ ನೀಡದೆ ಹೋದರೆ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ ಎಂದು ರಾಜ್ಯ ಸರ್ಕಾರ ದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳಾದ ಪ್ರಧಾನಮಂತ್ರಿ ಕಿಸಾನ್ ಯೋಜನೆ, ಮಹಿಳಾ ಸಂಘಗಳಿಗೆ ಸಂಜೀವಿನಿ ಯೋಜನೆಯಡಿ ಸಾಲ ಮತ್ತು ಸಹಾಯಧನ, ಮನೆಕಟ್ಟಿಕೊಳ್ಳಲು ಆಶ್ರಯ ವಸತಿ ಯೋಜನೆಯಡಿ ಸಹಾಯಧನ, ಅಂಗವಿಕಲರಿಗೆ ಸಹಾಯಧನ ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಇದೇ ವೇಳೆ ದೊಡ್ಡಗುಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಸುಮಾರು 17 ಜನ ಫಲಾನುಭವಿಗಳಿಗೆ 94 ಸಿಸಿ ಹಕ್ಕುಪತ್ರಗಳನ್ನು, ಅರ್ಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸಹಾಯಧನ, ಅಂಗವಿಕಲರಿಗೆ ಪ್ರೋತ್ಸಾಹ ಧನ, ಹಿರಿಯ ನಾಗರೀಕರಿಗೆ ಕಂಬಳಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ವಸಂತ್ ಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷ ರಾಂಪುರ ಚಂದ್ರಪ್ಪ, ಉಪಾಧ್ಯಕ್ಷೆ ಅಂಬಿಕಾ ಮಂಜುನಾಥ ಪಿಡಿಓ ರೋಹಿತ್ ಇದ್ದರು.