ಕೃಷಿ ಅಧಿಕಾರಿಗಳ ನಕಲಿ ಪತ್ರದ ತನಿಖೆಯಾಗಲಿ
ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.8: ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎನ್ನಲಾದ ಪತ್ರದಲ್ಲಿರುವ ಸಹಿಯ ಸತ್ಯಾಸತ್ಯತೆ ಪರಿಶೀಲಿಸಲು ವಿಧಿ ವಿಜ್ಞಾನ ಪ್ರಯೋಗಾಲಯದಿಂದ ತನಿಖೆ ಮಾಡಿಸಬೇಕೆಂದು ಕಾಂಗ್ರೆಸ್ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಸುಳ್ಳು ಆರೋಪ ಮಾಡಿ ಅವರ ಹಾಗೂ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಕೆಲವರು ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸಿದವರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಇಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷಿ ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ ಎನ್ನಲಾದ ದೂರಿನ ಪತ್ರದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮನವಿ ಮಾಡಿರುವುದಾಗಿ ಹೇಳಿದರು.
ಪತ್ರದಲ್ಲಿರುವ ಒಕ್ಕಣೆಯನ್ನು ನೋಡಿದರೆ ಆ ಪತ್ರದ ಹಿಂದೆ ಯಾರಿದ್ದಾರೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು. ಪತ್ರದಲ್ಲಿ ನಮ್ಮ ಶಾಸಕರಿದ್ದಾಗ ಎಂಬ ಒಕ್ಕಣೆ ಇದೆ. ಅದನ್ನು ನೋಡಿದರೆ ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಯಾವ ಶಾಸಕರು ಇದ್ದರು ಎಂಬುದು ಅರ್ಥವಾಗುತ್ತದೆ. ಪತ್ರ ಕುರಿತಂತೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಲ್ಲಿ ಮನವಿ ಮಾಡಿದ್ದು, ಈಗಾಗಲೇ ಸಿಐಡಿ ತನಿಖೆಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು.
ಮಂಡ್ಯದಲ್ಲಿ ಇಬ್ಬರ ಅಧಿಕಾರಿಗಳ ಪ್ರಸ್ತಾಪವೂ ಆಗಿದೆ. ವ್ಯಕ್ತಿಗತ ವಿಚಾರವನ್ನು ಮುಂದಿಟ್ಟುಕೊಂಡು ಇಂಥ ಷಡ್ಯಂತ್ರ ಮಾಡಲಾಗಿದೆ. ನಾಗಮಂಗಲ ಡಿಫೋದ ಬಸ್ ಚಾಲಕನ ಆತ್ಮಹತ್ಯೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಮುಖ್ಯಮಂತ್ರಿಗಳಿಬ್ಬರು ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲಾಗದ ವಿಚಾರವನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ್ದರು ಎಂದು ಆರೋಪಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಮಾತನಾಡಿ, ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರ ವಿರುದ್ಧ ಲಂಚದ ಸುಳ್ಳು ಆರೋಪ ಮಾಡಿ ಅವರ ತೇಜೋವಧೆಗೆ ಕೆಲವರು ಪ್ರಯತ್ನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸಿದವರನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದಿಂದ ಗೃಹ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಮೇಯರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಾಮಚಂದ್ರಪ್ಪ, ಜೆ.ಹುಚ್ಚಪ್ಪ ಮತ್ತಿತರರು ಉಪಸ್ಥಿತರಿದ್ದರು.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.