ತುಮಕೂರು, ಅ.11: ಜಿಲ್ಲೆಯಲ್ಲಿ ವರದಿಯಾದ ಮಹಿಳೆಯರ ಮೇಲಿನ ಕೌಟುಂಬಿಕ ಹಿಂಸೆ ಪ್ರಕರಣಗಳನ್ನು 60 ದಿನದೊಳಗೆ ಇತ್ಯರ್ಥಪಡಿಸಲು ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸೇರಿದಂತೆ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಜಿಲ್ಲೆಯ ವಿವಿಧ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಇಲಾಖೆಯಲ್ಲಿ ಕೌಟುಂಬಿಕ ಹಿಂಸೆಯಿಂದ
ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ 2023-24ನೇ ಸಾಲಿನ ಮೊದಲನೇ ತ್ರೈಮಾಸಿಕದಲ್ಲಿ ದಾಖಲಾದ 67 ಹಾಗೂ 2ನೇ ತ್ರೈಮಾಸಿಕದಲ್ಲಿ ದಾಖಲಾದ 79 ಪ್ರಕರಣಗಳಡಿ ಬಾಕಿ ಉಳಿದ 87ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಸೂಚಿಸಿದರು. ಇನ್ನು ಮುಂದೆ ಈ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು 60 ದಿನದೊಳಗೆ ಇತ್ಯರ್ಥಪಡಿಸಿ ಸಂತ್ರಸ್ತ ಮಹಿಳೆಯರಿಗೆ ಅನುಕೂಲ ಮಾಡಿಕೊಡಬೇಕೆಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ 2023ರ ಏಪ್ರಿಲ್ನಿಂದ ಸೆಪ್ಟೆಂಬರ್ ಅಂತ್ಯದವರೆಗೆ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಒಟ್ಟು 29 ಪ್ರಕರಣಗಳು ದಾಖಲಾಗಿವೆ.
ಬಾಲ್ಯವಿವಾಹವನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ತಮ್ಮ ವ್ಯಾಪ್ತಿಯಲ್ಲಿ ಮದುವೆಯಾಗಲಿರುವ ಗಂಡು ಮತ್ತು ಹೆಣ್ಣಿನ ವಯಸ್ಸಿನ ದಾಖಲೆಗಳನ್ನು ಪೋಷಕರಿಂದ ಪಡೆದು ನಿಗಧಿಪಡಿಸಿರುವ ವಯೋಮಿತಿ ಪೂರ್ಣಗೊಂಡಿರುವ ಬಗ್ಗೆ ದೃಢಪಡಿಸಿಕೊಳ್ಳುವ ಜವಾಬ್ದಾರಿಯನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ವಹಿಸಬೇಕು ಎಂದು ಸೂಚಿಸಿದರು.
ಅದೇ ರೀತಿ ಗಂಡು-ಹೆಣ್ಣಿನ ವಯಸ್ಸಿಗೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಪಡೆದ ನಂತರವೇ ದೇವಸ್ಥಾನಗಳಲ್ಲಿ ಮದುವೆಗೆ ಅವಕಾಶ ಕಲ್ಪಿಸಬೇಕೆಂದು ಎಲ್ಲ ಪುರೋಹಿತರಿಗೆ ಸುತ್ತೋಲೆ ಹೊರಡಿಸಬೇಕೆಂದು ಮುಜರಾಯಿ ತಹಶೀಲ್ದಾರರಾದ ಸವಿತಾ ಅವರಿಗೆ ನಿರ್ದೇಶನ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಮಾತನಾಡಿ, ಜಿಲ್ಲೆಯಲ್ಲಿ ಈವರೆಗೆ 29 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿದ್ದು, 21 ವಿವಾಹಗಳನ್ನು ತಡೆಯಲಾಗಿದೆ.
ತುಮಕೂರು ನಗರ, ಕೊರಟಗೆರೆ, ಮಧುಗಿರಿ, ಪಾವಗಡ, ಕುಣಿಗಲ್ ತಾಲ್ಲೂಕಿನಲ್ಲಿ ತಲಾ 1 ಹಾಗೂ ಗುಬ್ಬಿ ತಾಲೂಕಿನಲ್ಲಿ 3 ಸೇರಿ ಒಟ್ಟು 8 ಬಾಲ್ಯವಿವಾಹಗಳ ನಡೆದಿದ್ದು, ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಾಂತ್ವನ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನಲ್ಲಿ 710 ಕೌಟುಂಬಿಕ ದೌರ್ಜನ್ಯಗಳು ದಾಖಲಾಗಿದ್ದು, 685 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಮಾಹಿತಿ ನೀಡಿದರಲ್ಲದೆ ವರದಕ್ಷಿಣೆ ನಿಷೇಧ ಕಾಯ್ದೆಯಡಿ ವರದಿಯಾದ 70 ಪ್ರಕರಣಗಳ ಪೈಕಿ 23 ಪ್ರಕರಣಗಳನ್ನು ವಿಲೇವಾರಿ ಮಾಡಿದ್ದು, 47 ಪ್ರಕರಣಗಳು ಬಾಕಿ ಇವೆ ಎಂದು ತಿಳಿಸಿದರು.