ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.20: ರಾಜ್ಯದಲ್ಲಿ ಆಪರೇಷನ್ ಹಸ್ತ ಮುಂದುವರಿದಿದ್ದು, ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು. ಈ ವೇಳೆ ಅಪಾರ ಬೆಂಬಲಿಗರನ್ನು ಸೇರಿಸುವ ಮೂಲಕ ಪಕ್ಷದ ಕಚೇರಿ ಮುಂದೆ ಶಕ್ತಿ ಪ್ರದರ್ಶನವನ್ನೂ ಮಾಡಿದರು.
ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಮಾಜಿ ಶಾಸಕಿ ಪೂರ್ಣಿಮಾ ಅವರು ಕಳೆದ ಚುನಾವಣೆಯಲ್ಲಿ ಸೋತಿದ್ದರು. ಕಾಂಗ್ರೆಸ್ ಸೇರುವ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿ ಇಂದು ಅಂತಿಮವಾಗಿ ಪಕ್ಷ ಸೇರ್ಪಡೆಗೊಂಡರು. ಅವರೊಂದಿಗೆ ಅವರ ಪತಿ ಡಿ.ಟಿ ಶ್ರೀನಿವಾಸ್ ಹಾಗೂ ಹಲವು ಸಮುದಾಯದ ಮುಖಂಡರುಗಳ ಕಾಂಗ್ರೆಸ್ ಸೇರಿದರು.
ಪೂರ್ಣಿಮಾ ಪತಿ ಶ್ರೀನಿವಾಸ್ ಅವರಿಗೆ ಮುಂಬರುವ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡುವ ಭರವಸೆ ಮೇರೆಗೆ ಅವರು ಪಕ್ಷ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪೂರ್ಣಿಮಾ ಶ್ರೀನಿವಾಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗಿಯಾಗಿ ಪಕ್ಷದ ಭಾವುಟ ನೀಡುವ ಮೂಲಕ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಸಚಿವ ಡಿ. ಸುಧಾಕರ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಜರಿದ್ದರು.
ರಾಜಕೀಯವಾಗಿ ಅನ್ಯಾಯವಾಗಲ್ಲ:
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪೂರ್ಣಿಮಾ ಮತ್ತು ಶ್ರೀನಿವಾಸ್ ಸಾಮಾಜಿಕ ನ್ಯಾಯದ ಪರವಾಗಿರುವವರು. ಒಲ್ಲದ ಮನಸ್ಸಿನಿಂದ ಬಿಜೆಪಿಯಲ್ಲಿದ್ದರು. ಈಗ ಕಾಂಗ್ರೆಸ್ ಗೆ ಬಂದಿದ್ದಾರೆ. ಇವರಿಗೆ ರಾಜಕೀಯವಾಗಿ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳ ಪರವಾಗಿರುವ ಏಕೈಕ ರಾಷ್ಟ್ರೀಯ ಪಕ್ಷ ನಮ್ಮ ಕಾಂಗ್ರೆಸ್. ಸಾಮಾಜಿಕ ನ್ಯಾಯದಿಂದ ವಂಚಿತರಾದವರ ಧ್ವನಿಯಾಗಿ ಎ.ಕೃಷ್ಣಪ್ಪ, ಪೂರ್ಣಿಮಾ ಮತ್ತು ಶ್ರೀನಿವಾಸ್ ಮೊದಲಿನಿಂದಲೂ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಬಿಜೆಪಿ ಜಾತಿ ತಾರತಮ್ಯದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ಎಲ್ಲಾ ಜಾತಿಯ ಬಡವರು ಮತ್ತು ಶೂದ್ರ ಸಮುದಾಯದವರು ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡು ರಾಜಕೀಯ ನಿಲುವು ತೆಗೆದುಕೊಳ್ಳಬೇಕು ಎಂದರು.
ಪೂರ್ಣಿಮಾ, ಶ್ರೀನಿವಾಸ್ ಮತ್ತು ಇವರ ಬೆಂಬಲಿಗರಿಗೆ ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯ ಇಲ್ಲ ಎನ್ನುವುದು ಸ್ಪಷ್ಟವಾಗಿ ಮನದಟ್ಟಾಗಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯದ ಪರವಾಗಿ ನಿಲುವು ಇಟ್ಟುಕೊಂಡಿರುವವರಿಗೆ ಬಹಳ ಕಷ್ಟ ಎನ್ನುವುದು ಇವರನ್ನು ನೋಡಿದಾಗ ಸ್ಪಷ್ಟವಾಗಿದೆ. ಅದಕ್ಕೇ ಇಷ್ಟೊಂದು ಬೃಹತ್ ಪ್ರಮಾಣದಲ್ಲಿ ಹಿಂದುಳಿದ ಸಮುದಾಯಗಳು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಹೇಳಿದರು.
ಸಂತೋಷದ ದಿನ:
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಇಂದು ನನಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಬಹಳ ಸಂತೋಷದ ದಿನ. ನಾವು ಎ.ಕೃಷ್ಣಪ್ಪ ಅವರ ಜತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ಒಟ್ಟಾಗಿ ರಾಜಕಾರಣ ಮಾಡಿದವರು. ವೀರಪ್ಪ ಮೋಯ್ಲಿ ಅವರು ಟಿಕೆಟ್ ನೀಡಿ ಅವರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದ್ದರು. ನಮ್ಮ ತಪ್ಪುಗಳಿಂದ ಅವರ ಜತೆಗಿನ ಕೊಂಡಿ ಕಳಚಿತ್ತು. ಕೃಷ್ಣಪ್ಪ ಅವರ ಪುತ್ರಿ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಇಂದು ಮತ್ತೆ ಆ ಕೊಂಡಿ ಬೆಸೆದುಕೊಂಡಿದೆ ಎಂದು ಹೇಳಿದರು.
ನಾನು ಬಹಳ ದಿನಗಳಿಂದ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಗಾಳ ಹಾಕುತ್ತಿದ್ದೆ. ಪೂರ್ಣಿಮಾ ಅವರು ಪಕ್ಷಕ್ಕೆ ಬಾರದಿದ್ದಾಗ, ಅವರ ಪತಿ ಶ್ರೀನಿವಾಸ್ ಅವರಿಗೆ ಗಾಳ ಹಾಕಿದ್ದೆ. ಬೇರೆ ಲೆಕ್ಕಾಚಾರದಿಂದ ಇಷ್ಟು ದಿನ ಅವರು ಪಕ್ಷ ಸೇರಿರಲಿಲ್ಲ. ಇಂದು ಅವರು ತೀರ್ಮಾನ ಮಾಡಿ ನಿಮ್ಮೆಲ್ಲರ ಸಮ್ಮುಖದಲ್ಲಿ ನಮ್ಮ ಪಕ್ಷ ಸೇರುತ್ತಿದ್ದಾರೆ. ಇಂದು ಕೇವಲ ಪೂರ್ಣಿಮಾ ಅವರು ಹಾಗೂ ಶ್ರೀನಿವಾಸ್ ಇವರಿಬ್ಬರು ಮಾತ್ರ ಪಕ್ಷ ಸೇರುತ್ತಿಲ್ಲ. ಕರ್ನಾಟಕ ರಾಜ್ಯದ ಪ್ರವರ್ಗ 1ರ ಜಾತಿಯ ಒಕ್ಕೂಟ, ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘ ಸೇರಿದಂತೆ ಅನೇಕ ಸಂಘಟನೆಗಳ 4-5 ಸಾವಿರ ಕಾರ್ಯಕರ್ತರು ಪಕ್ಷ ಸೇರುತ್ತಿದ್ದಾರೆ ಎಂದರು.
ನಮ್ಮ ಕುಟುಂಬವನ್ನು ಎ.ಕೃಷ್ಣಪ್ಪ ಅವರ ಕುಟುಂಬ ಎಂದು ಗುರುತಿಸುತ್ತಾರೆ. ನನ್ನನ್ನು ಕಾಂಗ್ರೆಸ್ ಕೃಷ್ಣಪ್ಪ ಅವರ ಮಗಳು ಎಂದು ಗುರುತಿಸುತ್ತಾರೆ. ಎಲ್ಲರ ಅಪೇಕ್ಷೆ ಮೇರೆಗೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿದ್ದೇನೆ.
– ಪೂರ್ಣಿಮಾ ಶ್ರೀನಿವಾಸ್, ಮಾಜಿ ಶಾಸಕಿ