ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.8: ಜಿಲ್ಲೆಯಲ್ಲಿ ಜೂನ್ 12ರಿಂದ ಜೂ.19ರವರೆಗೆ 2023ರ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಗಂಗಾವತಿಯ ಎಂ.ಎನ್.ಎಂ ಸರಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು ಹಾಗೂ ಲಯನ್ಸ ಮಾದರಿಯ ಪ್ರೌಢ ಶಾಲೆ, ಕೊಪ್ಪಳದ ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಗವಿಸಿದ್ಧೇಶ್ವರ ಪ್ರೌಢ ಶಾಲೆ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು, ಸ್ವಾಮಿ ವಿವೇಕಾನಂದ ಪ್ರೌಢ ಶಾಲೆ, ಟಣಕನಕಲ್ ಆದರ್ಶ ವಿದ್ಯಾಲಯ ಹಾಗೂ ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜು, ಕುಷ್ಟಗಿಯ ಬಾಲಕಿಯರ ಸ.ಪ್ರೌ.ಶಾಲೆ ಹಾಗೂ ಕ್ರೈಸ್ತ್ ದ ಕಿಂಗ್ ಪ್ರೌಢ ಶಾಲೆ ಮತ್ತು ಯಲಬುರ್ಗಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ 11 ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಿಗದಿತ ದಿನಾಂಕದಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಯಲಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.