ಸುದ್ದಿಮೂಲ ವಾರ್ತೆ
ಕೆ.ಆರ್.ಪುರ ಸೆ.22:ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ಆದೇಶವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಮತ್ತು ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಕೆ.ಆರ್.ಪುರದ ಬಿಬಿಎಂಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕೇಂದ್ರ, ರಾಜ್ಯ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿದರು.
ಕೆ.ಆರ್.ಪುರದ ಬಿಬಿಎಂಪಿ ಕಚೇರಿಯಿಂದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ನೇತೃತ್ವದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಹೊರಡಲು ಮುಂದಾದ ಕಾರ್ಯಕರ್ತರನ್ನು ರಸ್ತೆ ಮಧ್ಯಯೇ ಪೊಲೀಸರು ತಡೆದು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಕಾವೇರಿ ಜಲಾಶಯದಲ್ಲಿ ನೀರು ಕಡಿಮೆ ಇರುವಾಗ ಕಾವೇರಿ ನೀರು ತಮಿಳುನಾಡಿಗೆ ಹರಿಸುವುದು ಸೂಕ್ತ ವಲ್ಲ, ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ರಚನೆಯಾದ ಬಳಿಕ ಅವತ್ತಿನಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕಿತ್ತು. ಆದರೆ ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಪಕ್ಷದ 18 ಸಂಸದರು ನಿದ್ದೆ ಮಾಡುತ್ತಿದ್ದಾರೆ. ಕೂಡಲೇ ಎಲ್ಲಾ ಸಂಸದರು ರಾಜೀನಾಮೆ ನೀಡಬೇಕು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕ ಜನತೆಯ ಪಾಲಿಗೆ ಮರಣಶಾಸನವಾಗಿದೆ ಎಂದು ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದ ಕಾವೇರಿ ನೀರಿನ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮ ಈ ರೀತಿಯ ತೀರ್ಪು ಬಂದಿದೆ,ರಾಜ್ಯ ಸರ್ಕಾರ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಬಿಡಬೇಕೆಂದು ನೀಡಿರುವ ಆದೇಶವನ್ನು ಧಿಕ್ಕರಿಸಬೇಕು ಕಾವೇರಿ ವಿಚಾರದಲ್ಲಿ ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಕಾವೇರಿ ನೀರು ಹರಿಸುವ ವಿಚಾರದಲ್ಲಿ ಬಂಗಾರಪ್ಪ ಅವರಂತೆ ಸುಗ್ರೀವಾಜ್ಞೆ ತಂದು ನೀರು ಹರಿಸುವುದನ್ನು ನಿಲ್ಲಿಸಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಮಾದರಿಯಾಗುವಂತೆ ನಡೆದುಕೊಳ್ಳಬೇಕು. ಈಗಲೇ ಕರ್ನಾಟಕದಲ್ಲಿ ಕುಡಿಯಲು ನೀರಿಲ್ಲ ತೀವ್ರ ಬರಗಾಲವಿದೆ. ನಗರದಲ್ಲಿ ನೀರಿನ ಕೊರತೆ ಎದುರಿಸುತ್ತಿರುವಾಗ ತಮಿಳುನಾಡಿನಲ್ಲಿ ಬೆಳೆ ಬೆಳೆಯಲು ನೀರು ಕೇಳುತ್ತಿರುವ ಧೋರಣೆ ಸರಿಯಲ್ಲ ಹೇಳಿದರು.
ಈ ಸಂದರ್ಭದಲ್ಲಿ ಕರವೇ ನಾರಾಯಣಗೌಡ ಬಣದ ರಾಜ್ಯ ಉಪಾಧ್ಯಕ್ಷ ವೀರಭದ್ರಪ್ಪ, ಕೆ.ಆರ್.ಪುರ ಅಧ್ಯಕ್ಷ ಎಂ.ಮಂಜುನಾಥ, ಪ್ರವೀಣ್ ಶೆಟ್ಟಿ ಬಣದ ಕೆ.ಆರ್.ಪುರ ಅಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಗಂಧರ್ವ ರಮೇಶ್, ಶಾಂತಕುಮಾರ್, ಮಹದೇವಪುರ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಕಾವೇರಿನಗರ ಎಸ್. ರವಿ, ಕೃಷ್ಣಮೂರ್ತಿ ಇದ್ದರು.