ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜು 13 : ತಾಲ್ಲೂಕಿನ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಾ. ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ನರೇಗಾ ಸಹಾಯಕ ನಿರ್ದೇಶಕರಾದ ಚಂದ್ರಪ್ಪ ರವರು ದೀಪ ಬೆಳಗುವುದರ ಮೂಲಕ ಹಾಗೂ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನರೇಗಾ ಸಹಾಯಕ ನಿರ್ದೇಶಕರಾದ ಚಂದ್ರಪ್ಪ, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಗಳಲ್ಲಿ ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿಲ್ಲವೆಂಬ ದೂರುಗಳು ಕಛೇರಿಯಲ್ಲಿ ಸ್ವೀಕೃತಿಯಾಗಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕ ಕುಂದುಕೊರತೆಗಳ ಸಭೆಗಳನ್ನು ಕಡ್ಡಾಯವಾಗಿ ಆಯೋಜಿಸಲಾಗುತ್ತಿದೆ. ಸಾರ್ವಜನಿಕರಿಗೆ ಪರಿಹಾರ ನೀಡಲು ಕ್ರಮವಹಿಸಬೇಕು ಎಂದರು.
ಗ್ರಾಮೀಣ ಜನರು ಹೆಚ್ಚಾಗಿ ದಿನಕೂಲಿಯನ್ನು ಅವಲಂಬಿಸಿದ್ದು, ಸರ್ಕಾರಿ ಕೆಲಸವಾಗಲೆಂದು ತನ್ನ ದಿನಕೂಲಿಯನ್ನು ಬಿಟ್ಟು ಸರ್ಕಾರಿ ಕಚೇರಿಗಳ ಸುತ್ತಲೂ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸಭೆ ಆಯೋಜಿಸಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆಗಳನ್ನು ಆಯೋಜಿಸಲು ಪ್ರಗತಿ ಪರಿಶೀಲನಾ ಸಭೆಯನ್ನು ಹಮ್ಮಿಕೊಂಡು ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಸಮಸ್ಯೆಗೆ ಪರಿಹಾರ ಒದಗಿಸುವಂತಾಗಬೇಕು ಎಂದರು.
ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಅಹವಾಲು ಸ್ವೀಕರಿಸಿ, ನಿವೇಶನ, ಮೂಲಭೂತ ಸೌಕರ್ಯಗಳು, ಬಸ್ ವ್ಯವಸ್ಥೆ ಸೇರಿದಂತೆ ವಿವಿಧ ಇಲಾಖೆಗಳಿಂದ ಆಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಭಕ್ತರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಲಿತಮ್ಮ ನಾರಾಯಣಸ್ವಾಮಿ ಉಪಾಧ್ಯಕ್ಷೆ, ಹೆಚ್.ಜೆ.ಕಲ್ಪನಾ ಮುನಿರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ಚಿದಾನಂದಮೂರ್ತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಂಜನ್ ಕುಮಾರ್, ಕರಾ ವಸೂಲಗಾರ ಹರೀಶ್,ಹಾಗೂ ವಿವಿಧ ಇಲಾಖೆಗಳ ಅಧಿಕಾರಿಯವರು ಮತ್ತು ಸಿಬ್ಬಂದಿ,ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ತಾಲ್ಲೂಕು ನರೇಗಾ ಸಂಯೋಜಕರಾದ ಲೋಕೇಶ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಹಾಜರಿದ್ದರು