ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.8: ‘ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರು. ಒಂದು ವೇಳೆ ಅವರು ಮುಖ್ಯಮಂತ್ರಿಯಾದರೆ ನಾನು ಯಾವುದೇ ತ್ಯಾಗಕ್ಕೂ ಸಿದ್ದ. ಅವರ ಜತೆ ಕೆಲಸ ಮಾಡಲು ನನಗೆ ಹೆಮ್ಮೆ ಇದೆ,’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸ ದಾಳ ಉರುಳಿಸಿದರು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಶನಿವಾರ ಮಾತನಾಡಿದ ಅವರು, ಖರ್ಗೆ ನನಗಿಂತ 20 ವರ್ಷಗಳ ಹಿರಿಯರು. ಅವರ ಹಿರಿತನ, ತ್ಯಾಗಕ್ಕೆ ನಾವು ಗೌರವ ನೀಡಬೇಕು ಎಂದು ಹೇಳಿದರು.
‘ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯ ಹಾಗೂ ದೇಶಕ್ಕೆ ಆಸ್ತಿ. ಪಕ್ಷ ಯಾವ ತೀರ್ಮಾನ ಮಾಡುತ್ತದೆಯೋ ನಾನು ಅದಕ್ಕೆ ಬದ್ಧವಾಗಿರುತ್ತೇನೆ. ಅವರು ಪಕ್ಷಕ್ಕಾಗಿ ಅನೇಕ ತ್ಯಾಗ ಮಾಡಿದ್ದಾರೆ. ಮಧ್ಯರಾತ್ರಿ ತಮ್ಮ ಶಾಸಕಾಂಗ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ಲಾಕ್ ಅಧ್ಯಕ್ಷರು ಇಂದು ಎಐಸಿಸಿ ಅಧ್ಯಕ್ಷರಾಗಿದ್ದು ಇದು ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಸಾಧ್ಯ. ಖರ್ಗೆ ಅವರು ಮುಖ್ಯಮಂತ್ರಿಯಾದರೆ ಅವರ ಜತೆ ಸಂತೋಷದಿಂದ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದರು. ಉಳಿದಂತೆ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಿಷ್ಟು;
ಕೋಲಾರದಲ್ಲಿ ಏ.16ರಂದು ಸಮಾವೇಶ:
ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ಪ್ರಕಟವಾದ ನಂತರ ಮೊದಲ ಸಾರ್ವಜನಿಕ ಸಭೆಯನ್ನು ಕೋಲಾರದಲ್ಲಿ ಏ.16ರಂದು ಹಮ್ಮಿಕೊಂಡಿದ್ದೇವೆ. ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಕೋಲಾರದಿಂದ ಚಾಲನೆ ನೀಡಲಾಗುತ್ತದೆ ಎಂದು ಹೇಳಿದರು.
ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಭಾಷಣ ಮಾಡಬೇಕು ಎಂದು ಹೇಳಿದಾಗ ನಾವು ಕೋಲಾರದಲ್ಲಿ ಜೈ ಭಾರತ ಸತ್ಯಾಗ್ರಹ ಯಾತ್ರೆ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಒಂದು ವಾರಗಳ ಕಾಲ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದು, ಅದಕ್ಕೆ ರಾಹುಲ್ ಗಾಂಧಿ ಅವರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಅದೇ ದಿನ ಕೆಪಿಸಿಸಿ ನೂತನ ಕಟ್ಟಡ ಉದ್ಘಾಟನೆ ಮಾಡಲಾಗುವುದು ಎಂದು ಹೇಳಿದರು.
ಸುಧಾಮ್ ದಾಸ್ ನೇಮಕ:
ಕೆಪಿಸಿಸಿ ಪ್ರಚಾರ ಸಮಿತಿಯ ಸಹ ಅಧ್ಯಕ್ಷರನ್ನಾಗಿ ಸುಧಾಮ್ ದಾಸ್ ಅವರನ್ನು ನೇಮಕ ಮಾಡಲಾಗಿದೆ. ಸುಧಾಮ್ ದಾಸ್ ಇಡಿ ಜಂಟಿ ಅಧಿಕಾರಿಯಾಗಿದ್ದರು. ಅವರು ಸಮಾಜದ ರಕ್ಷಣೆಗೆ ದೊಡ್ಡ ಬಳಗ ಕಟ್ಟಿಕೊಂಡು ಸಮುದಾಯ ರಕ್ಷಣೆ ಮಾಡುತ್ತಿದ್ದರು. ಇವರನ್ನು ಪಕ್ಷದಲ್ಲಿ ಬಳಸಿಕೊಳ್ಳಬೇಕು ಎಂದು ನೇಮಕ ಮಾಡುತ್ತಿದೆ. ಎಂ.ಬಿ ಪಾಟೀಲ್ ಅವರು ಅಧ್ಯಕ್ಷರಾಗಿದ್ದೂ, ಅವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಹೆಚ್ಚಿನ ಒತ್ತಡ ಹಾಕಬಾರದು ಎಂದು ಸುಧಾಮ್ ದಾಸ್ ಅವರನ್ನು ನೇಮಕ ಮಾಡಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಬೇಕು ಎಂದು ಎಲ್ಲರೂ ಕಾಯುತ್ತಿದ್ದಾರೆ. ಹೀಗಾಗಿ ಎಲ್ಲ ಅಧಿಕಾರಿ ವರ್ಗದವರು, ಸರ್ಕಾರಿ ನೌಕರರಿಗೆ ನಮ್ಮ ಸಾಮಾಜಿಕ ಬದ್ಧತೆ ಗಮನದಲ್ಲಿಟ್ಟುಕೊಂಡು ನಮಗೆ ಬೆಂಬಲ ನೀಡಬೇಕು ಎಂದು ಕೇಳುತ್ತೇನೆ ಎಂದು ಹೇಳಿದರು.
ಬಾಕ್ಸ್…
ಎಚ್. ವಿಶ್ವನಾಥ್ ಕಾಂಗ್ರೆಸ್ ಸೇರುತ್ತಾರೆ
ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ವಿಶ್ವನಾಥ್ ಅವರು ಮೊನ್ನೆಯಷ್ಟೇ ಪಶ್ಚಾತಾಪ ಸತ್ಯಾಗ್ರಹ ಮಾಡಿದ್ದಾರೆ. ಇಂದು ನನ್ನ ಜೊತೆ ಮಾತುಕತೆ ನಡೆಸಿದ್ದಾರೆ. ಏ.10ರ ಮಧ್ಯಾಹ್ನ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಿದರು.
ಟಿಕೆಟ್ ಅಸಮಾಧಾನದ ಕುರಿತ ಪ್ರಶ್ನೆಗೆ, ‘ನಾವು ಎಲ್ಲರ ಜತೆ ಮಾತನಾಡುತ್ತಿದ್ದೇವೆ. ರಾಜಕಾರಣದಲ್ಲಿ ಆಸೆ ಸಹಜ. ಈ ಸಂದರ್ಭದಲ್ಲಿ ನಾವು ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ. ರಾಜಕೀಯ ಎಂದರೆ ಅಧಿಕಾರ ಹಂಚಿ ಸಹಕಾರ ನೀಡುವುದಾಗಿದೆ. ಹೀಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರವನ್ನು ಹಂಚಲಾಗುವುದು. ಈ ಕಾರಣಕ್ಕಾಗಿ ಎಲ್ಲರೂ ಸಮಾಧಾನವಾಗಿ ಇರಬೇಕು ಎಂದು ಕೇಳುತ್ತಿದ್ದೇವೆ. ತಮ್ಮ ಆಕ್ರೋಶ, ಅಭಿಮಾನ ತಪ್ಪೇನಿಲ್ಲ. ಐದಾರೂ ವರ್ಷಗಳಿಂದ ದುಡಿದಿರುತ್ತಾರೆ. ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್ ಕೊಟ್ಟಾಗ ಅಸಮಾಧಾನ ಸಹಜ. ಬಿಜೆಪಿಯಲ್ಲಿ ಅಭ್ಯರ್ಥಿ ಪಟ್ಟಿ ಪ್ರಕಟವಾಗುವ ಮುನ್ನವೇ ಭಿನ್ನಮತವನ್ನು ನೀವು ಕಾಣುತ್ತಿದ್ದೀರಿ ಎಂದು ಹೇಳಿದರು.
‘ನಂದಿನಿ’ ವಿಚಾರಕ್ಕೆ ಎಲ್ಲರೂ ಧ್ವನಿ ಎತ್ತಬೇಕು
‘ನಂದಿನಿ ವಿಚಾರವಾಗಿ ಕನ್ನಡಪರ ಹೋರಾಟಗಾರರು ಮತ್ತು ಚಿತ್ರರಂಗದವರು ದನಿ ಎತ್ತಬೇಕು. ಮಹಾರಾಷ್ಟ್ರ ರಾಜ್ಯದ 864 ಹಳ್ಳಿಗೆ ಆರೋಗ್ಯ ವಿಮೆ ಯೋಜನೆಗೆ ಹಣ ನೀಡುತ್ತಿರುವುದರ ಬಗ್ಗೆಯೂ ಮಾತನಾಡುತ್ತಿಲ್ಲ. ಮುಖ್ಯಮಂತ್ರಿಗಳು ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಿತ್ತು. ಆದರೆ ಈ ವಿಚಾರವಾಗಿ ಚಲನಚಿತ್ರ ನಟರಾಗಲಿ, ಸಾಹಿತಿಗಳಾಗಲಿ, ಹೋರಾಟಗಾರರಾಗಲಿ ಯಾರೂ ಮಾತನಾಡುತ್ತಿಲ್ಲ ಎಂದು ಡಿ.ಕೆ. ಶಿವಕುಮಾರು ಭೇಸರ ವ್ಯಕ್ತಪಡಿಸಿದರು.