ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 5: ರಾಜಧಾನಿ ಬೆಂಗಳೂರಿನಲ್ಲಿ ಮೂರನೇ ದಿನವೂ ಮಳೆಯ ಆರ್ಭಟ ಮುಂದುವರಿದಿದ್ದು, ಗುರುವಾರ ಸಂಜೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ನಗರದ ಮೆಜೆಸ್ಟಿಕ್, ಮಲ್ಲೇಶ್ವರ, ಯಶವಂತಪುರ, ಬಸವನಗುಡಿ, ಟೌನ್ಹಾಲ್, ಚಾಮರಾಜಪೇಟೆ, ಉತ್ತರಹಳ್ಳಿ, ಕೆಂಗೇರಿ ಸೇರಿ ಹಲವೆಡೆ ಮಳೆ ಭರ್ಜರಿ ಮಳೆಯಾಗಿದೆ.
ಸಂಜೆ 6 ಗಂಟೆ ವೇಳೆಗೆ ವೇಳೆಗೆ ಆರಂಭವಾದ ದಿಢೀರ್ ಮಳೆಯಿಂದ ಸಿಲಿಕಾನ್ ಸಿಟಿ ಜನರು ಹೈರಾಣಾಗಿದ್ದಾರೆ. ಮಳೆ ಆರಂಭವಾಗುತ್ತಿದ್ದಂತೆ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.
ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸೃಷ್ಟಿಯಾಗಿರುವ ಸುಳಿಗಾಳಿಯ ಪರಿಣಾಮ ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ಒಳನಾಡಿನ ಬಹುತೇಕ ಭಾಗಗಳಲ್ಲಿ ರಾತ್ರಿಯಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಪೂರ್ವ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಇದರ ನಡುವೆಯೇ ಬೆಂಗಳೂರು ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 6ರ ವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.