ಸುದ್ದಿಮೂಲ ವಾರ್ತೆ
ಬೆಂಗಳೂರು, ಸೆ.28: ಬಿಜೆಪಿ ವಿರುದ್ಧ ಸೆಟೆದು ನಿಂತಿರುವ ವಿಧಾನ ಪರಿಷತ್ ಸದಸ್ಯ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು, ಬಿಜೆಪಿ ಅಸಮಾಧಾನಿತ ನಾಯಕರನ್ನು ಕಾಂಗ್ರೆಸ್ಗೆ ಕರೆತರಲು ಪ್ರಯತ್ನ ಆರಂಭಿಸಿದ್ದಾರೆ.
ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ಈಗಾಗಲೇ ಆಪರೇಷ್ ಹಸ್ತ ಸದ್ದು ಮಾಡಿದೆ. ಇದಕ್ಕೆ ಜಗದೀಶ್ ಶೆಟ್ಟರ್ ಅವರೂ ಸಹ ಸಾಥ್ ನೀಡಿದ್ದಾರೆ. ಶಿರಹಟ್ಟಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ಮತ್ತು ಮೂಡಿಗೆರೆಯ ಮಾಜಿ ಶಾಸಕರಾದ ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆ ಮಾಡಿಕೊಳ್ಳಲು ಶೆಟ್ಟರ್ ಉತ್ಸುಕರಾಗಿದ್ದಾರೆ.
ಈ ಸಂಬಂಧ ಅವರು ಇಬ್ಬರು ನಾಯಕರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಂಮಾಡಿ ಪಕ್ಷ ಸೇರ್ಪಡೆ ಸಂಬಂಧ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿಯೇ ಈ ಇಬ್ಬರು ನಾಯಕರು ಕೈ ಪಕ್ಷ ಸೇರಲಿದ್ದಾರೆ ಎನ್ನಲಾಗಿದೆ.
ಇಬ್ಬರು ಪರಿಶಿಷ್ಟ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿದ ಕಾರಣ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ಮತ್ತೊಂದೆಡೆ ಮೂಡಿಗೆರೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಎಂ.ಪಿ. ಕುಮಾರಸ್ವಾಮಿ ಅವರು ಜೆಡಿಎಸ್ ಸೇರಿದ್ದರು. ಈಗ ಈ ಇಬ್ಬರೂ ನಾಯಕರು ಶೆಟ್ಟರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸಿದ್ದಾರೆ.