ಸುದ್ದಿಮೂಲ ವಾರ್ತೆ
ಮೈಸೂರು ನ.09 : ಆಸ್ಪತ್ರೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ವೇಳೆ ವೈದ್ಯರು ನಿರ್ಲಕ್ಸ್ಯ ಮಾಡದೆ ವೈದ್ಯಕೀಯ ನೆರವು ನೀಡಬೇಕು. ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪ್ರಕರಣಗಳು ಕಡಿಮೆಯಾಗಬೇಕು. ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡುವಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಎಸ್ ಮಂಜು ಸೂಚನೆ ನೀಡಿದರು.
ಗುರುವಾರ ಜಿ.ಪಂ ಕಛೇರಿಯ ಡಿ. ದೇವರಾಜ ಅರಸು ಸಭಾಂಗಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಮತ್ತು ಅವುಗಳ ರೂಪುರೇಷೆಗಳನ್ನು ತಯಾರಿಸುವ ಬಗ್ಗೆ ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.
ಯಾವುದೇ ರೀತಿಯ ತಾರತಮ್ಯವಿಲ್ಲದೇ ಮಕ್ಕಳನ್ನು ರಕ್ಷಿಸುವ ಮತ್ತು ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜವಾಬ್ದಾರಿಯಾಗಿದ್ದು, ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಕಾಯಿದೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಹೇಳಿದರು.
ಶಾಲೆಗಳಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲಾ ಮುನ್ನೆಚ್ಚರಿಕೆ ಕೈಗೊಂಡು, ಮಕ್ಕಳ ಹಕ್ಕುಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕು ಎಂದು ತಿಳಿಸಿದ ಅವರು, ಮಕ್ಕಳಿಗೆ ಶೌಚಾಲಯ, ಪುಸ್ತಕ, ಸಮವಸ್ತ್ರ ಸೇರಿದಂತೆ ಸರ್ಕಾರದಿಂದ ನೀಡುವ ಅಗತ್ಯ ಮಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದರು.
ದೂರು ಪೆಟ್ಟಿಗೆ ಅಳವಡಿಸಿ
ಎಲ್ಲಾ ಶಾಲೆಗಳಲ್ಲಿ ದೂರು ಪೆಟ್ಟಿಗೆ ಅಳವಡಿಸಿ, 1098 ಶಾಲೆಗಳಲ್ಲಿ ಚೈಲ್ಡ್ಲೈನ್ ಸಂಖ್ಯೆಯನ್ನು ಕಡ್ಡಾಯವಾಗಿ ಅಳವಡಿಸಬೇಕು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ತಿಳಿಸಿದರು.
ಶಾಲಾ ವಾಹನಗಳಲ್ಲಿ ಮಕ್ಕಳ ನಿಗದಿಗಿಂತ ಹೆಚ್ಚು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದ್ದು ಈ ಬಗ್ಗೆ ಆರ್.ಟಿ.ಓ. ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕೈಗೊಳ್ಳಬೇಕು. ಅಲ್ಲಿ ಹೆಚ್ಚು ಬಸ್ ಗಳನ್ನು ನಿಯೋಜಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಮಾತನಾಡಿ, ಮಕ್ಕಳ ರಕ್ಷಣೆಗೆ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಗೆ ಎಲ್ಲಾ ಇಲಾಖೆಗಳು ಪೂರಕ ವಾತಾವರಣ ನಿರ್ಮಾಣ ಮಾಡುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು, ಮಕ್ಕಳ ರಕ್ಷಣೆಗಾಗಿ ರೂಪಿಸಿರುವ ಕಾಯ್ದೆಯ ಆಶಯ ಮತ್ತು ಉದ್ದೇಶಗಳನ್ನು ಯಶಸ್ವಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.
ಮಕ್ಕಳ ಹಕ್ಕುಗಳ ಉಲ್ಲಂಘನೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಸಿಇಓ ಕೆ.ಎಂ.ಗಾಯಿತ್ರಿ ತಾಕೀತು ಮಾಡಿದರು. ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಸವರಾಜು, ಜಿಲ್ಲಾ ರಕ್ಷಣಾ ಘಟಕದ ಅಧಿಕಾರಿ ಯೊಗೇಶ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.