ಸುದ್ದಿಮೂಲ ವಾರ್ತೆ
ಶಿಡ್ಲಘಟ್ಟ, ಜೂ.15: ಖಾಸಗಿ ವಿದ್ಯಾಸಂಸ್ಥೆಗಳು ಶಾಲೆಯ ಆರ್ಥಿಕ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಳ್ಳದೆ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.
ನಗರದ ಶ್ರೀ ವಾಸವಿ ವಿದ್ಯಾಸಂಸ್ಥೆಗೆ ಬುಧವಾರ ಭೇಟಿ ನೀಡಿ 2023 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಾಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅವರು ಮಾತನಾಡಿದರು.
ಶಿಡ್ಲಘಟ್ಟ ತಾಲ್ಲೂಕು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು ಇಲ್ಲಿನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಖಾಸಗಿ ವಿದ್ಯಾಸಂಸ್ಥೆಗಳು ಪಣ ತೊಡಬೇಕಾದ ಅಗತ್ಯತೆ ಇದೆ ಎಂದರು.
ತಮ್ಮ ಅಧಿಕಾರದ ಅವಧಿಯಲ್ಲಿ ಕ್ಷೇತ್ರದ ಶೈಕ್ಷಣಿಕ ಪ್ರಗತಿ ಸೇರಿದಂತೆ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಲಿದ್ದು ಎಲ್ಲರ ಸಹಕಾರ ಅಗತ್ಯ ಎಂದರು.
2023 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಪಡೆದ ಶಾಲೆಯ ಐದು ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ರಮೇಶ್, ಮಾಜಿ ಜಿ.ಪಂ ಸದಸ್ಯ ಬಂಕ್ ಮುನಿಯಪ್ಪ ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಟಿ.ಎ.ಕೃಷ್ಣಯ್ಯಶೆಟ್ಟಿ, ನಗರಸಭೆ ಸದಸ್ಯರಾದ ಚೈತ್ರಾ ಮನೋಹರ್, ಎಸ್.ರಾಘವೇಂದ್ರ, ಜೆಡಿಎಸ್ ಮುಖಂಡರಾದ ತಾದೂರು ರಘು,ಲಕ್ಷ್ಮಿನಾರಾಯಣ (ಲಚ್ಚಿ), ಎಸ್.ಎಂ.ರಮೇಶ್, ಸಂಸ್ಥೆಯ ಆಡಳಿತಾಧಿಕಾರಿ ರೂಪಸಿರಮೇಶ್, ನಿರ್ದೇಶಕರಾದ ವಿ.ಎಸ್.ರಾಜೇಶ್, ಅಜಯ್ ಕೀರ್ತಿ, ಮುಖ್ಯಶಿಕ್ಷಕ ಶಿವಕುಮಾರ್ ಹಾಜರಿದ್ದರು.