ಸುದ್ದಿಮೂಲ ವಾರ್ತೆ
ಬೆಂಗಳೂರು,ಆ,6: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ ಎಂದು ವಿವರಿಸಿದರು.
ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.
ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ ಎಂದರು.
ಮಧುಗಿರಿಯನ್ನು ಜಿಲ್ಲೆ ಮಾಡುವ ಕುರಿತು ಸಚಿವ ಕೆ.ಎನ್.ರಾಜಣ್ಣ ಅವರ ಬೇಡಿಕೆ ಮಂಡಿಸಿದ್ದಾರೆ. ನಾನು ಇದನ್ನು ಖಂಡಿತ ಪರಿಶೀಲಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.
ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಾತನಾಡಿ, ಮಧುಗಿರಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ನೋಡಬೇಕೆಂಬುದು ಕೆ.ಎನ್.ರಾಜಣ್ಣನವರ ಹಾಗೂ ಇಲ್ಲಿನ ಜನರ ಬಹಳ ವರ್ಷದ ಕನಸಾಗಿದ್ದು, ಮುಖ್ಯಮಂತ್ರಿಗಳು ಮಧುಗಿರಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವ ಮೂಲಕ ಇಲ್ಲಿನ ಜನರ ಬಹುದಿನದ ಕನಸನ್ನು ನನಸು ಮಾಡಬೇಕೆಂದು ಮನವಿ ಮಾಡಿದರು.
ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೀರಭಾಗ್ಯ ಯೋಜನೆಯ ಜಾರಿಯಿಂದಾಗಿ 27ಲಕ್ಷ ಹಾಲು ಉತ್ಪಾದಕರು ಹಾಗೂ 14 ಹಾಲು ಒಕ್ಕೂಟಗಳಿಗೆ ಲಾಭವಾಗಿದೆ. ಕ್ಷೀರಭಾಗ್ಯ ಯೋಜನೆಯ ಮೂಲಕ ಕೆಎಂಎಫ್ಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದ ಅವರು, ಹಾಲಿನ ಪುಡಿಯ ದರವನ್ನು ಹೆಚ್ಚಳ ಮಾಡುವಂತೆ ಈ ಸಂದರ್ಭ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 10 ಮಕ್ಕಳಿಗೆ ಸಾಂಕೇತಿಕವಾಗಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾಲನ್ನು ವಿತರಿಸಿದರು ಮತ್ತು ಮಕ್ಕಳು ಸಂತಸದಿಂದ ಹಾಲನ್ನು ಸೇವಿಸಿದರು.
ಕ್ಷೀರಭಾಗ್ಯ ಕಾರ್ಯಕ್ರಮವನ್ನು ಅಂದು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ ಹಿರಿಯ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ಹಾಗೂ ಕರ್ನಾಟಕ ಹಾಲು ಮಂಡಳ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಎ.ಎಸ್ ಪ್ರೇಮನಾಥ್ ಅವರುಗಳಿಗೆ ಈ ಸಂದರ್ಭ ಮುಖ್ಯಮಂತ್ರಿಗಳು ಸನ್ಮಾನಿಸಿದರು.
ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರುಗಳಾದ ರಂಗನಾಥ್, ಷಡಕ್ಷರಿ ಸೇರಿಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.