ಸುದ್ದಿಮೂಲ ವಾರ್ತೆ
ಬೆಂಗಳೂರು, ಜು.17: ದಲಿತರ ಜಮೀನುಗಳ ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಸಂಬಂಧ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ ಹಾಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪಿ.ಟಿ.ಸಿ.ಎಲ್. ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞ ರೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ದಲಿತರ ಜಮೀನುಗಳ ಹಕ್ಕು ಕಾಪಾಡುವ ನಿಟ್ಟಿನಲ್ಲಿ ಪಿ.ಟಿ.ಸಿ.ಎಲ್ ಕಾಯ್ದೆಗೆ ತಿದ್ದುಪಡಿ ಮಾಡುವ ಕುರಿತ ಸರ್ಕಾರದ ನಿಲುವನ್ನು ಆಯವ್ಯಯದಲ್ಲಿಯೂ ಸ್ಪಷ್ಟ ಪಡಿಸಲಾಗಿದೆ. ಪ್ರಸ್ತುತ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದಲ್ಲಿಯೇ ಕಾಯ್ದೆ ತಿದ್ದುಪಡಿ ಮಾಡುವ ಉದ್ದೇಶದಿಂದ ಸಮುದಾಯದ ಮುಖಂಡರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ವಿವರಿಸಿದರು.
ಈ ಕಾಯ್ದೆಯಡಿ ಪಿಟಿಸಿಎಲ್ ಕಾಯ್ದೆಯ ಉದ್ದೇಶ ಪರಿಣಾಮಕಾರಿಯಾಗಿ ಈಡೇರಬೇಕು, ಭೂಮಿ ಕಳೆದುಕೊಂಡವರಿಗೆ ನ್ಯಾಯಾಲಯದಲ್ಲಿ ಹಿನ್ನಡೆ ಆಗಬಾರದು ಎನ್ನುವ ಉದ್ದೇಶದಿಂದ ಈ ಬಗ್ಗೆ ದಲಿತ ಮುಖಂಡರ ಮತ್ತು ನ್ಯಾಯವಾದಿಗಳ ಅಭಿಪ್ರಾಯ ಹಾಗೂ ಕಾನೂನು ತಜ್ಞರ ಅಭಿಪ್ರಾಯವನ್ನೂ ಪಡೆದುಕೊಳ್ಳುತ್ತೇವೆ ಎಂದರು.
ನಾವು ಮೊದಲೇ ಕೊಟ್ಟಿದ್ದ ಭರವಸೆಯಂತೆ ಈ ಸರ್ಕಾರದ ಮೊದಲನೇ ಅಧಿವೇಶನದಲ್ಲೇ ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದ್ದೇವೆ ಎಂದು ತಿಳಿಸಿದರು.