ಸುದ್ದಿಮೂಲ ವಾರ್ತೆ
ಹೊಸಕೋಟೆ,ನ.21 : ಸರಕಾರದ ಸುತ್ತೋಲೆಯಂತೆ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ನೆರವಾಗುವಂತೆ ಸಮುದಾಯದ ಮುಖಂಡರುಗಳಿಗೆ ಶಾಸಕ ಶರತ್ ಬಚ್ಚೇಗೌಡ ಸೂಚಿಸಿದರು.
ಹೊಸಕೋಟೆ ನಗರದ ತಾಲೂಕು ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ನ. 30 ರಂದು ನಡೆಯಲಿರುವ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಸರಳ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗುವುದು.
ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಮೂಲಕ ಕನಕ ದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು ಸೂಕ್ತ ಎಂದರು.
ತಹಶೀಲ್ದಾರ್ ವಿಜಯ್ ಕುಮಾರ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್,ನಗರಸಭೆ ಆಯುಕ್ತ ಜಹೀರ್ ಅಬ್ಬಾಸ್, ಕುರುಬ ಸಮುದಾಯದ ಮುಖಂಡರುಗಳಾದ ಮುನಿಶಾಮಣ್ಣ, ಕೆ.ಮಲ್ಲಸಂದ್ರ ಶೇಷಪ್ಪ, ಕಲ್ಲಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.