ಸುದ್ದಿಮೂಲ ವಾರ್ತೆ
ತುಮಕೂರು, ಅ.25:ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹ ಶಿಕ್ಷಕ ಮತದಾರರ ನೋಂದಣಿಗಾಗಿ ಜಿಲ್ಲಾದ್ಯಂತ ಅ. 25ರ ಬುಧವಾರದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.
ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರ ನೋಂದಣಿಗೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ. ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯ ಎಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಡಾ. ವೈ.ಎ. ನಾರಾಯಣಸ್ವಾಮಿ ಅವಧಿಯು 2024ರ ಜೂನ್ 21ಕ್ಕೆ ಕೊನೆಗೊಳ್ಳಲಿರುವ ಹಿನ್ನೆಲೆಯಲ್ಲಿ ಮತದಾರರ ನೋಂದಣಿ ಕಾರ್ಯವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ನಿಗಧಿತ ಶೈಕ್ಷಣಿಕ ಸಂಸ್ಥೆಗಳಲ್ಲಿರುವ ಅರ್ಹ ಶಿಕ್ಷಕ ಮತದಾರರಿಗೆ ನಮೂನೆ-19ನ್ನು ವಿತರಿಸಿ ಭರ್ತಿ ಮಾಡಿದ ಅರ್ಜಿಯನ್ನು ನಿಗಧಿತ ಅವಧಿಯೊಳಗೆ ಅವರಿಂದ ಪಡೆಯಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹೋಬಳಿವಾರು ಶಿಕ್ಷಣ ಸಂಸ್ಥೆಗಳನ್ನು ಪಟ್ಟಿ ಮಾಡಿ ಮತದಾರರ ನೋಂದಣಿ ದಿನಾಂಕ ಹಾಗೂ ಸ್ಥಳವನ್ನು ನಿಗಧಿಪಡಿಸಿ ಈಗಾಗಲೇ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ಸೈಟ್ನಲ್ಲಿ ಪ್ರಕಟಿಸಿರುವ ಶಿಕ್ಷಣ ಸಂಸ್ಥೆಗಳನ್ನು ಹೊರತುಪಡಿಸಿ ಇತರೆ ಯಾವುದೇ ಶಿಕ್ಷಣ ಸಂಸ್ಥೆಗಳಿಂದ ನೋಂದಣಿ ಅರ್ಜಿ ಸ್ವೀಕರಿಸಲು ಅವಕಾಶವಿರುವುದಿಲ್ಲವೆಂದು ತಿಳಿಸಿದರು.
ಪಾಲಿಕೆ ಉಪ ಆಯುಕ್ತೆ ಸುಮತಿ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಅ. 26ರಂದು ತುಮಕೂರು ವಿಶ್ವವಿದ್ಯಾನಿಲಯ, ಅ.27 ರಂದು ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯ, ಅ.30 ರಂದು ಎಸ್ಐಟಿ ಕಾಲೇಜು ಹಾಗೂ ಅ.31 ರಂದು ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಶಿಕ್ಷಕ ಮತದಾರರ ನೋಂದಣಿ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಮಹಾನಗರಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ವಿವಿ ಕುಲಸಚಿವೆ ನಹೀದಾ ಜಂಜಂ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.