ಬೆಂಗಳೂರು, ಆ. 13 : ಸಾಮಾಜಿಕ ಜಾಲತಾಣದಲ್ಲಿ ಲೈವ್ ವಿಡಿಯೋ ಮಾಡಿದ್ದ ನಟ ಉಪೇಂದ್ರ, ದಲಿತ ಸಮುದಾಯದವರ ಭಾವನೆಗಳಿಗೆ ಧಕ್ಕೆ ಆಗುವ ಗಾದೆಯೊಂದನ್ನು ಬಳಸಿದ್ದರ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ನಟನ ವಿರುದ್ಧ ದೂರು ದಾಖಲಾಗಿದೆ.
ಉಪೇಂದ್ರ ಅವರು ಕಟ್ಟಿರುವ ಪ್ರಜಾಕೀಯ ಪಕ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಲೈವ್ಗೆ ಬಂದಿದ್ದರು. ಈ ವೇಳೆ ಮಾತನಾಡುವಾಗ ‘ಊರೆಂದ ಮೇಲೆ ಹೊಲಗೇರಿ ಇದ್ದೇ ಇರುತ್ತದೆ’ ಎಂದು ಹೇಳಿದ್ದರು. ಆದರೆ ಇವರ ಮಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಗಳು ನಡೆದಿವೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ನೀಡಿದ ದೂರಿನ ಮೇರೆಗೆ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ದಲಿತ ಸಮುದಾಯ ಸೇರಿದಂತೆ ಎಲ್ಲೆಡೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಉಪೇಂದ್ರ ಅವರು ಕ್ಷಮೆ ಕೇಳಿದ್ದರು. “ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಗಾದೆ ಮಾತನ್ನು ಬಳಸಿದ್ದೆ., ಆದರೆ ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಲೈವ್ ವಿಡಿಯೋವನ್ನು ಡಿಲೀಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆಯಿರಲಿ” ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.
ಕ್ಷಮೆ ಕೇಳಿದ ಮೇಲೂ ಆಕ್ಷೇಪಗಳು ವ್ಯಕ್ತವಾಗುತ್ತಿರುವ ಕಾರಣ ಮತ್ತೊಂದು ಪೋಸ್ಟ್ ಮಾಡಿರುವ ಉಪೇಂದ್ರ, “ಇಂದು ನನ್ನ ವಿರುದ್ಧ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ದ್ವೇಷ ?” ಎಂದು ಬರೆದುಕೊಂಡಿದ್ದಾರೆ.