ಸುದ್ದಿಮೂಲ ವಾರ್ತೆ
ಬೆಂಗಳೂರು, ಆ.8: ಮಾಜಿ ಮುಖ್ಯಮಂತ್ರಿ ಬಸವರಾಯ ಬೊಮ್ಮಾಯಿ ಅವರು ಇಂದು ನವದೆಹಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಮಾಡಿದರು.
ಅಮಿತ್ ಶಾ ಆಹ್ವಾನದ ಮೇರೆಗೆ ಕಳೆದ ಭಾನುವಾರವೇ ನವದೆಹಲಿಗೆ ತೆರಳಿದ್ದ ಬೊಮ್ಮಾಯಿ ಅವರು, ಸಂಸತ್ ಅಧಿವೇಶನ ಕಾರಣದಿಂದ ಶಾ ಭೇಟಿಗೆ ಸಮಯಾವಕಾಶ ಸಿಕ್ಕಿರಲಿಲ್ಲ. ಮಂಗಳವಾರ ಸಂಜೆ ಭೇಟಿ ಮಾಡಿ ಸುದೀರ್ಘ ಚರ್ಚೆ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಸಜ್ಜುಗೊಳಿಸುವ ಸಂಬಂಧ ಬೊಮ್ಮಾಯಿ ಅವರೊಂದಿಗೆ ಚರ್ಚೆ ಮಾಡಲಾಯಿತು ಎಂದು ಹೇಳಲಾಗಿದೆ.
ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಸಂಬಂಧವೂ ಚರ್ಚೆಯಾಗಿದೆ. ಬೊಮ್ಮಾಯಿ ಅವರು ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಆದರೆ, ಯಾವ ಹುದ್ದೆಗೆ ಯಾರನ್ನು ಆಯ್ಕೆ ಮಾಡಬಹುದು ಎಂಬ ನಿರ್ಧಾರವನ್ನು ಶಾ ತಿಳಿಸಿಲ್ಲ ಎಂದು ಹೇಳಲಾಗುತ್ತಿದೆ.
ಅಧ್ಯಕ್ಷ ಮತ್ತು ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಯಾವುದೇ ನಿಖರ ಮಾಹಿತಿ ನೀಡದ ಕಾರಣ ಈ ಸ್ಥಾನಗಳಿಗೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಗೊಂದಲ ಹಾಗೆಯೇ ಮುಂದುವರಿದಿದೆ.
ಈ ಮಧ್ಯೆ ಬಸವರಾಜ ಬೊಮ್ಮಾಯಿ ಸೋಮವಾರ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಮುಂಬರು ಲೋಕಸಭಾ ಚುನಾವಣೆಯಲ್ಲಿ ಪಕ್ಷ ಸಂಘಟನೆ ಮತ್ತು ಅಭ್ಯರ್ಥಿಗಳ ಆಯ್ಕೆ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದರು.
ಕಾಂಗ್ರೆಸ್ 20 ಸ್ಥಾನ ಗೆಲ್ಲುವ ಸಾಧ್ಯತೆ ಇಲ್ಲ. ಭಾರತೀಯ ಜನತಾ ಪಕ್ಷ ತನ್ನ ಸ್ಥಾನಗಳು ಗೆಲ್ಲಲು ಎಲ್ಲಾ ರೀತಿಯ ಪ್ರಯತ್ನ ಮಾಡಲಿದೆ ಎಂದಿದ್ದರು.