ಸುದ್ದಿಮೂಲ ವಾರ್ತೆ
ತುಮಕೂರು, ನ.22 : ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 2016ರಂತೆ 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 15 ರಿಂದ 18 ವರ್ಷದೊಳಗಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್, ಕೃಷಿ ಮತ್ತು ಇನ್ನಿತರೆ ಅಪಾಯಕಾರಿ ಉದ್ಯಮಗಳಲ್ಲಿ ದುಡಿಸಿಕೊಳ್ಳುವ ಮಾಲೀಕರಿಗೆ 2 ವರ್ಷ ಜೈಲು ಶಿಕ್ಷೆಯೊಂದಿಗೆ 50ಸಾವಿರ ರೂ.ಗಳ ದಂಡ ವಿಧಿಸಲಾಗುವುದೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಬಾಲಕಾರ್ಮಿಕ ಕಾಯ್ದೆ 1986ರ ಸೆಕ್ಷನ್ 17ರಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಿಂದ ನೇಮಕವಾದ ನಿರೀಕ್ಷಕರು ತಮ್ಮ ವ್ಯಾಪ್ತಿಯಲ್ಲಿರುವ ಅಂಗಡಿ ಮುಂಗಟ್ಟು, ಹೋಟೆಲ್, ಗ್ಯಾರೇಜ್ಗಳಲ್ಲಿ 18 ವರ್ಷದೊಳಗಿನ ಮಕ್ಕಳು ಕೆಲಸ ಮಾಡುತ್ತಿರುವ ಬಗ್ಗೆ ಮೊದಲ ಹಂತದಲ್ಲಿ ಪರಿಶೀಲನೆ ಮಾಡಬೇಕು ಎಂದರಲ್ಲದೆ, ಯಾವುದಾದರೂ ವಾಣಿಜ್ಯ ಸಂಸ್ಥೆಗಳಲ್ಲಿ ಮಕ್ಕಳು ಕೆಲಸ ಮಾಡುವುದು ಕಂಡು ಬಂದರೆ ಅದರ ಮಾಲೀಕರಿಗೆ ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮತ್ತು ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು.
ಕಾಯ್ದೆಯ ಬಗ್ಗೆ ಅರಿವಿದ್ದರೂ ಸಹ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಗಮನಕ್ಕೆ ಬಂದರೆ ದಾಳಿ ನಡೆಸಿ ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕೆಂದು ಹೇಳಿದರು.
ಕಾರ್ಮಿಕ ಇಲಾಖೆಯ ಕಾರ್ಮಿಕ ನಿರೀಕ್ಷಕರು ಪೊಲೀಸ್ ಠಾಣೆಗೆ ತಪ್ಪಿತಸ್ಥ ಮಾಲೀಕರ ವಿರುದ್ಧ ಎಫ್.ಐ.ಆರ್. ದಾಖಲಿಸಲು ಬಂದಾಗ ವಿಳಂಬ ಮಾಡದೆ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕೆಂದು ಹೇಳಿದರು.
ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ಸೇರಿಸಿದರಿಂದಾಗುವ ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಆಯೋಜಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೊಬ್ಬರಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಉತ್ತರ ಭಾರತದ ಕಾರ್ಮಿಕ ಮಕ್ಕಳಿಗೆ ಶಿಕ್ಷಣ ನೀಡುವ ಉದ್ದೇಶದಿಂದ ಸಂಜೆ ಶಾಲೆಗಳನ್ನು ಆರಂಭಿಸಲು ಕ್ರಮ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಹೇಳಿದರು.
ಜಿಲ್ಲೆಯಲ್ಲಿ ನೋಂದಣಿ ಮಾಡಿಕೊಂಡಿರುವ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ ಟಾಪ್ಗಳನ್ನು ತಾಲ್ಲೂಕುವಾರು ವಿತರಣೆ ಮಾಡಬೇಕು ಎಂದು ತುಮಕೂರು ವಿಭಾಗ ಮತ್ತು ಮಧುಗಿರಿ ಉಪವಿಭಾಗಗಳ ಕಾರ್ಮಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಸಂಗ್ರಹವಾಗಿರುವ ಕಾರ್ಪಸ್ ನಿಧಿ ಹಾಗೂ ಅದರಿಂದ ಬಂದಿರುವ ಬಡ್ಡಿ ಹಣವನ್ನು ಬಾಲಕಾರ್ಮಿಕ ಕುಟುಂಬಗಳ ಪುನರ್ವಸತಿ ಹಾಗೂ ಅವರ ಕಲ್ಯಾಣಕ್ಕಾಗಿ ಮಾತ್ರವಿನಿಯೋಗಿಸಬೇಕು ಎಂದು ಹೇಳಿದರು.