ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.4: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡದಿದ ಹೆಸರುಗಳು ಕೆಲಕಾಲ ಗೊಂದಲ ಉಂಟುಮಾಡಿತ್ತು. ಬಳಿಕ ಇದೊಂದು ನಕಲಿ ಪಟ್ಟಿ ಎಂದು ಬಿಜೆಪಿ ಸ್ಪಷ್ಟೀಕರಣ ನೀಡಿತು.
ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿ ನಿರಂತರ ಸಭೆಗಳನ್ನು ನಡೆಸುತ್ತಿದೆ. ಇದರ ಮಧ್ಯೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಹೆಸರಿನಲ್ಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದರಲ್ಲಿ ಬಹುತೇಕರಿಗೆ ಟಿಕಟ್ ಕೈತಪ್ಪಿರುವುದು ಮತ್ತು ಪ್ರಮುಖರ ಕ್ಷೇತ್ರ ಬದಲಾವಣೆ ಆಗಿರುವುದನ್ನು ಕಂಡು ಅಚ್ಚರಿ ಪಟ್ಟಿದ್ದಾರೆ.
ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂಬುದನ್ನು ಕೆಲವೇ ಕ್ಷಣಗಳಲ್ಲಿ ಅರಿತ ಬಿಜೆಪಿ ಇದು ನಕಲಿ ಪಟ್ಟಿ ಎಂದು ಸ್ಪಷ್ಟನೆ ನೀಡಿತು. ಕಾಂಗ್ರೆಸ್ ವಿರುದ್ಧ ಪೊಲೀಸರಿಗೆ ದೂರು: ನಮ್ಮ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಹೆಡ್ ಕ್ವಾರ್ಟರ್ ಅವರ ಹೆಸರು ಹಾಗೂ ಸೀಲಿನೊಂದಿಗೆ ಬಿಜೆಪಿಯ 100 ವಿಧಾನಸಭಾ ಕ್ಷೇತ್ರಗಳ ಪಟ್ಟಿಯನ್ನು ಕಾಂಗ್ರೆಸ್ ಹೆಸರಿನಲ್ಲಿ ಬಿಡುಗಡೆ ಮಾಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್ ಅವರು ಆರೋಪಿಸಿ ಈ ಸಂಬಂಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು.
ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದು ಕಾಂಗ್ರೆಸ್ ದಿವಾಳಿತನಕ್ಕೆ ಸಾಕ್ಷಿ ಎಂದು ಟೀಕಿಸಿದರು. ಇದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಮಣಿಸಲು ಸಾಧ್ಯವಾಗದೆ ಈ ರೀತಿ ಹತಾಶರಾಗಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ನಮ್ಮಲ್ಲಿ ಗೊಂದಲ ಸೃಷ್ಟಿಸಲು ಹೀಗೆ ಮಾಡುತ್ತಿದ್ದಾರೆ.
ರಾಷ್ಟ್ರೀಯ ಪಕ್ಷದ ಘನತೆಗೆ ಈ ಮೂಲಕ ಅವರು ಧಕ್ಕೆ ತಂದುಕೊಳ್ಳುತ್ತಿದ್ದಾರೆ ಎಂದು ನುಡಿದರು. ಅರುಣ್ ಸಿಂಗ್ ಸ್ಪಷ್ಟನೆ: ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವವರ ಪಟ್ಟಿಯನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಸುಳ್ಳು ಸುದ್ದಿ ಪ್ರಕಟಿಸಲಾಗಿದೆ. ಸುಳ್ಳು ಸುದ್ದಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ಸ್ಪಷ್ಟಪಡಿಸಿದ್ದಾರೆ.