ಸುದ್ದಿಮೂಲ ವಾರ್ತೆ
ತಿಪಟೂರು : ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಬದುಕು ಯುವ ಪೀಳಿಗೆಯ ಭವಿಷ್ಯಕ್ಕೆ ದಾರಿ ದೀಪವಾಗಬೇಕಿದೆ ಎಂದು ಶಾಸಕ ಕೆ. ಷಡಕ್ಷರಿ ತಿಳಿಸಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಚರಿಸಿದ 77ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವು ಇಂದು ಸಂಭ್ರಮದಿಂದ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಿದ್ದೇವೆ ಎಂದರೆ ಅದು ನಮ್ಮ ದೇಶದ ಮಹನೀಯರು ಸ್ವಾತಂತ್ರ್ಯ ಹೋರಾಟಗಾರರ ದೇಶಭಕ್ತಿ ಭವಿಷ್ಯದ ಮಕ್ಕಳಿಗೆ ದಾರಿ ದೀಪವಾಗಬೇಕು.
ವಿಶ್ವಮಟ್ಟದಲ್ಲಿ ಭಾರತದ ಶ್ರೇಷ್ಠ ಸ್ಥಾನ ಪಡೆದುಕೊಂಡಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ನಿಟ್ಟಿನಲ್ಲಿ ಅವಿರತವಾಗಿ ದೇಶದ ಅಭಿವೃದ್ದಿಗೆ ಶ್ರಮಿಸುತ್ತಿವೆ ಎಂದರು.
ಹಿರಿಯ ಪ್ರಾಧ್ಯಾಪಕ ಪ್ರೊ. ಟಿ. ವೆಂಕಟಾಚಲಯ್ಯ ಮತ್ತು ಪ್ರಾಧ್ಯಾಪಕ ಡಾ. ನಾಗೇಂದ್ರಪ್ಪ ಮಾತನಾಡಿ, ಭಾರತದಲ್ಲಿ ಒಂದು ಸಾವಿರಕ್ಕೂ ಹೆಚ್ಚು ವಿಶ್ವವಿದ್ಯಾನಿಲಯಗಳು ಸ್ಥಾಪನೆಗೊಂಡು ವಿಶ್ವಮಟ್ಟದಲ್ಲಿ ಭಾರತ ಶ್ರೇಷ್ಠ ಶೈಕ್ಷಣಿಕ ಪ್ರಗತಿಯನ್ನು ಸಾಧಿಸುತ್ತಿರುವುದು ಹೆಮ್ಮೆಯ ವಿಷಯವಾಗಿದ್ದು, ನಾವೆಲ್ಲರೂ ಈ ದೇಶದ ಘನತೆ ಮತ್ತು ಗೌರವವನ್ನು ಎತ್ತಿಹಿಡಿಯಬೇಕೆಂದರು.
ಪ್ರಾಂಶುಪಾಲ ಡಾ. ಕುಮಾರಸ್ವಾಮಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮದಿಂದ ಇಂದು ನಾವೆಲ್ಲರೂ ಕೂಡ ಸಹಬಾಳ್ವೆ ನಡೆಸುತ್ತಿರುವುದು ನಮ್ಮೆಲ್ಲರ ಪುಣ್ಯ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು,ಎನ್.ಎಸ್.ಎಸ್., ದಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.