ಸುದ್ದಿಮೂಲ ವಾರ್ತೆ
ಮಂಡ್ಯ,ಸೆ.21 : ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕಾವೇರಿ ನದಿ ನೀರು ಹಂಚಿಕೆ ಸಂಬಂಧ ವಿಚಾರಣೆಯಲ್ಲಿ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದ್ದು, ರೈತರು, ಸಾರ್ವಜನಿಕರು, ಹೋರಾಟಗಾರರು ತೀರ್ಪಿನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.
ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ್ದ ಆದೇಶವನ್ನೇ ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಪ್ರತಿನಿತ್ಯ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಮಧ್ಯಂತರ ತೀರ್ಪು ನೀಡಿದೆ.
ಸೆಪ್ಟೆಂಬರ್ 23 ರಂದು ಸ್ತಬ್ಧವಾಗಲಿದೆ. ಮಂಡ್ಯ ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರೀಂ ಕೋರ್ಟ್ ನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ಮುಂದಾಗಿರುವ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮಂಡ್ಯ ಬಂದ್ ಗೆ ಕರೆ ನೀಡಿದೆ.
ಸೆ.23ರಂದು ಜಿಲ್ಲೆಯಾದ್ಯಂತ ಬಂದ್ ಮಾಡಿ ರಾಜ್ಯ, ಕೇಂದ್ರ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಕೈಜೋಡಿಸುವಂತೆ ಮನವಿ ಮಾಡಿದೆ.
ಇಂದು ಮತ್ತೊಂದು ಸಭೆ ಮಂಡ್ಯ ಬಂದ್ ಗೆ ಕರೆ ನೀಡಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಶುಕ್ರವಾರ ಮತ್ತೊಂದು ಸುತ್ತಿನ ಸಭೆ ನಡೆಸಲು ತೀರ್ಮಾನಿಸಿದೆ. ಎಲ್ಲ ರಾಜಕೀಯ ಮುಖಂಡರು, ನಾಯಕರು, ಕಾರ್ಯಕರ್ತರು, ವಿವಿಧ ಕನ್ನಡಪರ, ಪ್ರಗತಿಪರ, ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳ ಸಭೆ ನಡೆಸಿ ಬಂದ್ ನ ರೂಪುರೇಷೆ ಸಿದ್ಧಪಡಿಸುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.