ನಕಲಿ ಹುಲಿ ಉಗುರೂ ಧರಿಸದಂತೆ ಈಶ್ವರ ಖಂಡ್ರೆ ಮನವಿ
ಅಕ್ರಮ ವನ್ಯಜೀವಿ ಉತ್ಪನ್ನಗಳನನ್ನು ಸರ್ಕಾರಕ್ಕೆ ವಾಪಸ್ ಪಡೆಯಲು ಚಿಂತನೆ
ಸುದ್ದಿಮೂಲ ವಾರ್ತೆ
ಬೆಂಗಳೂರು, ಅ.26: ಅಕ್ರಮವಾಗಿ ವನ್ಯಜೀವಿ ಉತ್ಪನ್ನಗಳನ್ನು ಇಟ್ಟುಕೊಂಡಿರುವವರು ಅವುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದು ಅವಕಾಶ ನೀಡುವ ಸಂಬಂಧ ಪರಾಮರ್ಶಿಸಲಾಗುತ್ತಿದೆ ಎಂದು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ವನ್ಯಜೀವಿ ಸಂರಕ್ಷಣಾ ಕಾಯ್ದೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಇದೆ. ಹೀಗಾಗಿ ಕೇಂದ್ರದ ಸಹಕಾರವನ್ನೂ ಪಡೆಯಬೇಕು. ಕಾನೂನು ತಜ್ಞರ ಜೊತೆಗೂ ಸಹ ಚರ್ಚಿಸಿ ಇದರ ಸಾಧಕ ಬಾಧಕಗಳನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ತಮ್ಮ ಪೂರ್ವಜರು ಹೊಂದಿದ್ದ ವನ್ಯಜೀವಿ ಅಂಗಾಂಗದಿಂದ ಮಾಡಿದ ಟ್ರೋಫಿ, ಫಲಕ, ಪೆಂಡೆಂಟ್ ಸೇರಿದಂತೆ ಯಾವುದೇ ಉತ್ಪನ್ನಗಳನ್ನು ಅರಣ್ಯ ಇಲಾಖೆಯಿಂದ ದೃಢೀಕರಿಸಿಕೊಂಡು ಮಾಲೀಕತ್ವದ ಹಕ್ಕು ಪಡೆದುಕೊಳ್ಳಲು 2003ರವರೆಗೆ ಹಲವು ಅವಕಾಶ ನೀಡಲಾಗಿತ್ತು. ಹಲವರು ತಮ್ಮ ಬಳಿ ಇದ್ದ ವನ್ಯಜೀವಿ ಉತ್ಪನ್ನಗಳಿಗೆ ಮಾಲೀಕತ್ವದ ಹಕ್ಕು ಪಡೆದಿದ್ದಾರೆ. ಇನ್ನೂ ಅನೇಕರು ದೃಢೀಕರಣ ಮತ್ತು ಪ್ರಮಾಣ ಪತ್ರ ಪಡೆದಿಲ್ಲ ಎಂದು ಹೇಳಿದರು.
ಗ್ರಾಮೀಣ ಪ್ರದೇಶದ ಕೆಲವರ ಮನೆಗಳಲ್ಲಿ ಜಿಂಕೆ ಚರ್ಮ, ಆನೆ ದಂತದಿಂದ ಮಾಡಿದ ಕಲಾಕೃತಿಗಳು, ಜಿಂಕೆ ಮತ್ತು ಸಾರಂಗದ ಕೊಂಬು ಇತ್ಯಾದಿಗಳನ್ನು ಇಟ್ಟುಕೊಂಡಿರುತ್ತಾರೆ. ಇದು ಅಪರಾಧ ಎಂಬುದೂ ಅವರಿಗೆ ತಿಳಿದಿಲ್ಲ. ವರ್ತೂರು ಸಂತೋಷ ಪ್ರಕರಣ ವರದಿಯಾದ ಬಳಿಕ, ವನ್ಯಜೀವಿ ಉತ್ಪನ್ನಗಳ ಅಕ್ರಮ ದಾಸ್ತಾನಿನ ಬಗ್ಗೆ ಹೆಚ್ಚಾಗಿ ದೂರುಗಳು ಬರುತ್ತಿವೆ. ಕಾನೂನಿನ ಅರಿವಿಲ್ಲದ ಶ್ರೀಸಾಮಾನ್ಯರಿಗೆ ಆಗುವ ತೊಂದರೆ ತಪ್ಪಿಸಲು ಒಂದು ಬಾರಿ ಕೊನೆಯದಾಗಿ ಇಂತಹ ಅಕ್ರಮ ಸಂಗ್ರಹಣೆ/ದಾಸ್ತಾನಿನ ಬಗ್ಗೆ ಘೋಷಣೆ ಮಾಡಿಕೊಳ್ಳಲು ಮತ್ತು ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡುವ ಬಗ್ಗೆ ಪರಾಮರ್ಶಿಸಿ, ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.
ಅಳಿವಿನಂಚಿನಲ್ಲಿರುವ, ಅಮೂಲ್ಯ ಮತ್ತು ಅಪರೂಪದ ವನ್ಯ ಜೀವಿಗಳಾದ ಹುಲಿ, ಚಿರತೆ, ಚಿಂಕಾರ, ಕೃಷ್ಣಮೃಗ, ಸಾಂಬಾರ್, ಕರಡಿ ಸೇರಿದಂತೆ ಹಲವು ಕಾಡು ಪ್ರಾಣಿಗಳನ್ನು ಪರಿಶಿಷ್ಟ 1ರಲ್ಲಿ ಪಟ್ಟಿ ಮಾಡಲಾಗಿದ್ದು, ಇಂತಹ ಪ್ರಾಣಿಗಳನ್ನು ಕೊಲ್ಲುವುದು, ಬೇಟೆ ಆಡುವುದು, ಅಂತಹ ಪ್ರಾಣಿಗಳ ದೇಹದ ಯಾವುದೇ ಭಾಗದಿಂದ ತಯಾರಿಸಿದ ವಸ್ತುವನ್ನು ಅಲಂಕಾರಿಕವಾಗಿ ಮನೆಯಲ್ಲಿಡುವುದು, ಧರಿಸುವುದು ಕೂಡ ಅಪರಾಧವಾಗಿರುತ್ತದೆ ಎಂದು ತಿಳಿಸಿದರು.
ಎಂಟು ದೂರುಗಳು:
ಬಿಗ್ಬಾಸ್ ಸ್ಪರ್ಧಿ ಸಂತೋಷ್ ಅವರು ಹುಲಿ ಉಗುರು ಧರಿಸಿದ್ದರು ಎಂಬ ಕಾರಣಕ್ಕಾಗಿ ಅವರನ್ನು ಬಂಂದಿಸಿದ್ದರಿಂದ ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿದೆ. ಅಕ್ರಮವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿದ್ದಾರೆ ಎಂದು ಎಂಟು ದೂರುಗಳು ಬಂದಿದ್ದವು. ಅದರಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಂಟು ಕಡೆ ದಾಳಿ ಮಾಡಿ ಹುಲಿ ಉಗುರಿನ ಪೆಂಡೆಂಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಅವುಗಳನ್ನು ಎಫ್ಎಸ್ಎಲ್ ವರದಿಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಹುಲಿ ಉಗುರು ಬಿಗ್ಬಾಸ್ ಸ್ಪರ್ಧಿ ಸಂತೋಷ್ ಮತ್ತು ತುಮಕೂರು ಜಿಲ್ಲೆಯಲ್ಲಿ ಅರ್ಚಕರಿಬ್ಬರ ಬಂಧನವಾಗಿದೆ. ಆದರೆ, ದರ್ಶನ್ ಮತ್ತು ಜಗ್ಗೇಶ್ ಅವರ ಮನೆಯಲ್ಲಿ ಹುಲಿ ಉಗುರು ಸಿಕ್ಕರೂ ಅವರ ಬಂಧನ ಏಕೆ ಮಾಡಿಲ್ಲ ಎಂಬ ಪ್ರಶ್ನೆಗೆ, ಕಾನೂನು ಎಲ್ಲರಿಗೂ ಒಂದೇ. ಅರಣ್ಯಾಧಿಕಾರಿಗಳು ಪರಿಶೀಲನೆಗೆ ಹೋದಾಗ ಯಾರು ಸಹಕಾರ ನೀಡಬೇಕು. ಸಹಕಾರ ನೀಡದವರ ವಿರುದ್ಧ ಬಂಧನ ಸೇರಿದಂತೆ ಆ ಕ್ಷಣದ ಕಾನೂನು ಕ್ರಮಗಳನ್ನು ಕೈಗೊಳ್ಳಲು ಅರಣ್ಯಾಧಿಕಾರಿಗಳಿಗೆ ಅವಕಾಶ ಇದೆ ಎಂದು ಸ್ಪಷ್ಟನೆ ನೀಡಿದರು.
ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಎಲ್ಲರಿಗೂ ಕಾನೂನು ಸಮಾನವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಗಣ್ಯರೂ ಸೇರಿದಂತೆ ಹಲವರಿಗೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳು ಕಾನೂನು ರೀತ್ಯ ಮತ್ತು ಆಯಾ ಸಂದರ್ಭಕ್ಕೆ ಅನುಗುಣವಾಗಿ ತಮ್ಮ ವಿವೇಚನಾಧಿಕಾರ ಬಳಸಿ ಕ್ರಮ ಜರುಗಿಸಲಿದ್ದಾರೆ ಎಂದರು.
ನಕಲಿ ಲಾಕೆಟ್ ಕೂಡ ಧರಿಸದಂತೆ ಮನವಿ:
ಚಿತ್ರನಟರು, ಗಣ್ಯರು ನಕಲಿ ಹುಲಿ ಉಗುರಿನ ಲಾಕೆಟ್ ಕೂಡ ಧರಿಸಿದರೂ ಇತರರಿಗೆ ಪ್ರೇರಣೆ ಸಿಗುತ್ತದೆ. ಅವರಿಗೆ ಸಾವಿರಾರು ಅಭಿಮಾನಿಗಳು ಇರುತ್ತಾರೆ. ಅವರು ಕೂಡ ತಮ್ಮ ನಾಯಕನಂತೆ ಹುಲಿ ಉಗುರಿನ ಲಾಕೆಟ್ ಧರ ಧರಿಸಲು ಬಯಸುತ್ತಾರೆ. ಆಗ ಬೇಡಿಕೆ ಹೆಚ್ಚುತ್ತದೆ. ವನ್ಯಜೀವಿಗಳ ಹತ್ಯೆ ಆಗುತ್ತದೆ. ಇದಕ್ಕೆ ಪರೋಕ್ಷ ಕುಮ್ಮಕ್ಕು ನೀಡಿದಂತೆ ಆಗುತ್ತದೆ. ಹೀಗಾಗಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಗಣ್ಯರು, ನಟರು ನಕಲಿ ಪೆಂಡೆಂಟ್ ಕೂಡ ಧರಿಸಬಾರದು ಎಂದು ಮನವಿ ಮಾಡಿದರು.
1926 ಹೆಲ್ಪ್ ಲೈನ್ ನಂಬರ್:
ಅರಣ್ಯ ಇಲಾಖೆಗೆ 1926 ಎಂಬ ಸಹಾಯವಾಣಿ ಇದ್ದು ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ದೂರು ದಾಖಲಿಸಲು, ಅರಣ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಅವಕಾಶವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ ಸುಮಾರು 4 ಸಾವಿರ ಹುದ್ದೆ ಖಾಲಿ ಇದ್ದು, ಈಗಾಗಲೇ ಹಣಕಾಸು ಇಲಾಖೆ 800 ಹುದ್ದೆ ಭರ್ತಿಗೆ ಅನುಮತಿ ನೀಡಿದೆ. ಶೀಘ್ರವೇ ಇದರ ಭರ್ತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಅರಣ್ಯ ಪಡೆ ಮುಖ್ಯಸ್ಥರಾದ ಬ್ರಿಜೆಶ್ ಕುಮಾರ್ ದೀಕ್ಷಿತ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಸುಭಾಶ್ ಮಾಲ್ಕಡೆ ಮತ್ತಿತರರು ಪಾಲ್ಗೊಂಡಿದ್ದರು.