ಸುದ್ದಿಮೂಲ ವಾರ್ತೆ
ತುಮಕೂರು, ಏ.26: ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮತದಾನ
ದಿನದಂದು ಪ್ರತಿಯೊಬ್ಬರೂ ಬಿಡುವು ಮಾಡಿಕೊಂಡು ತಪ್ಪದೇ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಬೇಕು. ವಲಸೆ ಹೋಗಿರುವ ಕುಟುಂಬ ಸದಸ್ಯರಿಗೆ ಮತದಾನ ದಿನದ ಮಾಹಿತಿ ನೀಡಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಡಾ. ಕೆ.ವಿದ್ಯಾಕುಮಾರಿ ಮನವಿ ಮಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಸ್ವೀಪ್ ಸಮಿತಿ ಸಹಯೋಗದಲ್ಲಿ ತಾಲ್ಲೂಕಿನ ನಾಗವಲ್ಲಿ ಗ್ರಾಮ ಪಂಚಾಯತಿ ಆವರಣದಲ್ಲಿ ಮಂಗಳವಾರ ಸಂಜೆ ಹಮ್ಮಿಕೊಂಡಿದ್ದ
ಮತದಾನ ಅರಿವು ಮೂಡಿಸುವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಯಾವುದೇ ಆಮಿಷಗಳಿಗೆ ಒಳಗಾಗದೆ ಶಾಂತಿಯುತವಾಗಿ ಮತದಾನ ಮಾಡುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.
ಕಳೆದ ಚುನಾವಣೆಗಳನ್ನು ಅವಲೋಕಿಸಿದಾಗ ನಗರ ಪ್ರದೇಶದಲ್ಲಿ ಶೇ. 65ರಷ್ಟು ಮಾತ್ರ ಮತದಾನವಾಗಿದ್ದು, ಈ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಮತದಾನ ಮಾಡುವುದರ ಮೂಲಕ ಮತದಾನ ಪ್ರಮಾಣವನ್ನು ಶೇ.100ರಷ್ಟಾಗುವಂತೆ ಹೆಚ್ಚಿಸಬೇಕು ಎಂದರು.
ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ಜೈಪಾಲ್ ಪ್ರತಿಜ್ಞಾವಿಧಿಯನ್ನು ಬೋಧಿಸಿ, ಅರ್ಹ ಮತದಾರರು ತಪ್ಪದೇ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿಯಬೇಕು ಎಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ತಹಶೀಲ್ದಾರ್ ಸಿದ್ದೇಶ್, ತಾಲ್ಲೂಕು ಪಂಚಾಯತಿ ಸಹಾಯಕ ನಿರ್ದೇಶಕ(ಗ್ರಾ ಉ) ಮಂಜುನಾಥ್, ಗ್ರಾಮ ಪಂಚಾಯತಿ ಅಭಿವೃದ್ಧಿ
ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.