ಸುದ್ದಿಮೂಲ ವಾರ್ತೆ
ತುಮಕೂರು, ಮೇ 12: ಜಿಲ್ಲೆಯಲ್ಲಿ ಮೇ 10ರಂದು ನಡೆದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಒಟ್ಟು 198 ಸುತ್ತಿನಲ್ಲಿ ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.
ಜಿಲ್ಲೆಯ ಮಧುಗಿರಿ, ಪಾವಗಡ, ಕೊರಟಗೆರೆ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕಾ ಕಾರ್ಯವನ್ನು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು; ಚಿಕ್ಕನಾಯಕನಹಳ್ಳಿ, ತಿಪಟೂರು, ತುರುವೇಕೆರೆ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ಕಲಾ ಕಾಲೇಜು ಹಾಗೂ ಕುಣಿಗಲ್, ತುಮಕೂರು ನಗರ, ತುಮಕೂರು ಗ್ರಾಮಾಂತರ, ಗುಬ್ಬಿ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆಯನ್ನು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ 8ರಿಂದ ನಡೆಸಲಾಗುವುದು.
ಮತ ಎಣಿಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೂ ತಲಾ 14ರಂತೆ ಒಟ್ಟು 154 ಇವಿಎಂ ಟೇಬಲ್ಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್ಗೂ ಅಗತ್ಯ ಸಾಮಗ್ರಿಗಳಾದ ಪೆನ್ನು, ಪೆನ್ಸಿಲ್, ಕಟರ್ಗಳನ್ನು ಒದಗಿಸಲಾಗುವುದು. ಇದಕ್ಕಾಗಿ ಒಟ್ಟು 651 ಅಧಿಕಾರಿ, ಸಿಬ್ಬಂದಿ ಹಾಗೂ ಮೈಕ್ರೋ ಅಬ್ಸರ್ವರ್ಗಳನ್ನು ನಿಯೋಜಿಸಲಾಗಿದೆ.
ಸುಗಮವಾಗಿ ಮತ ಎಣಿಕೆ ನಡೆಸುವ ನಿಟ್ಟಿನಲ್ಲಿ ಮತ ಎಣಿಕಾ ಕೇಂದ್ರಕ್ಕೆ ಬಿಗಿ ಭದ್ರತೆಯನ್ನು ಒದಗಿಸಲು 5 ಮಂದಿ ಡಿವೈಎಸ್ಪಿ, 17 ಮಂದಿ ಪೊಲೀಸ್ ಇನ್ಸ್ಪೆಕ್ಟರ್, 33 ಮಂದಿ ಸಬ್ ಇನ್ಸ್ಪೆಕ್ಟರ್, 55 ಮಂದಿ
ಸಹಾಯಕ ಸಬ್ಇನ್ಸ್ಪೆಕ್ಟರ್, 285 ಮಂದಿ ಪೊಲೀಸ್ ಸಿಬ್ಬಂದಿ, 18 ಮಂದಿ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಶಸ್ತ್ರ ಸಜ್ಜಿತ ಕೇಂದ್ರೀಯ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.