ಸುದ್ದಿಮೂಲ ವಾರ್ತೆ
ಬೆಳಗಾವಿ, ಅ.3: ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಎಲ್ಲರಿಗೂ ಸಾಮಾಜಿಕ ನ್ಯಾಯ ದೊರೆತಿಲ್ಲ. ಇನ್ನೂ ಕೂಡ ಅನೇಕ ಜಾತಿಗಳು ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವಿಲ್ಲ. ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಈಗಲೂ ಇಂಥ ಸ್ಥಿತಿ ಇದೆ ಎಂದು ಮುಖ್ಯವಾಹಿನಿಗೆ ಬರದೇ ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.
ಬೆಳಗಾವಿಯ ನೆಹರೂ ನಗರದ ಜಿಲ್ಲಾ ಕ್ರೀಡಾ ಮೈದಾನದಲ್ಲಿ ಇಂದು ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ನ 9ನೇ ರಾಷ್ಟ್ರೀಯ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಜಾತಿ ವ್ಯವಸ್ಥೆಯ ಸಮಾಜದಲ್ಲಿ ವಾಸ್ತವಿಕ ಅಂಶಗಳನ್ನು ಅರ್ಥಮಾಡಿಕೊಂಡು ಅದರಂತೆ ನಡೆಯಬೇಕಾದುದ್ದು ನಮ್ಮ ಕರ್ತವ್ಯ. ಈ ದೃಷ್ಟಿಯಿಂದ ಇಂಥ ಸಂಘಟನೆ, ಸಮಾವೇಶಗಳು ಅತ್ಯಂತ ಅವಶ್ಯಕ. ಅಧಿಕಾರ ವಿಕೇಂದ್ರೀರಣವಾಗಿ, ಗ್ರಾಮ ಸ್ವರಾಜ್ಯವಾಗಬೇಕು ಎಂದು ಗಾಂಧಿಜೀ ಹೇಳಿದ್ದರು ಎಂದು ತಿಳಿಸಿದರು.
ಕುರುಬ ಸಮಾಜ ಸಂಘಟಿತವಾಗಿ ಉತ್ತಮ ಕೆಲಸ ಮಾಡಿದೆ. ರಾಜಕೀಯ ಶಕ್ತಿ ಬೆಳೆದು ಎಲ್ಲರಿಗೂ ಅಧಿಕಾರದಲ್ಲಿ ಪಾಲು ಸಿಗಬೇಕು. ಯಾವುದೇ ಸಮಾಜದ ಪ್ರಗತಿಗೆ ರಾಜಕೀಯ ಪ್ರಾತಿನಿಧ್ಯ ಅತ್ಯಗತ್ಯ. ನಿಮ್ಮ ಪರವಾಗಿ ಧ್ವನಿ ಎತ್ತುವವರು ಇಲ್ಲದಿದ್ದಾಗ ಆ ಸಮುದಾಯ ಹಿಂದುಳಿಯುತ್ತದೆ. ಸಂಘಟನೆ ಮಾಡಿ, ರಾಜಕೀಯವಾಗಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.
ಎಸ್ಟಿಗೆ ಸೇರಿಸಲು ಒತ್ತಾಯ:
ಎಲ್ಲ ಜಾತಿಯವರನ್ನೂ ಒಳಗೊಂಡು ಸರ್ಕಾರವನ್ನು ನಡೆಸುವಂತಹ ಶಕ್ತಿ ಕೊಡು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅನೇಕ ರಾಜ್ಯಗಳಲ್ಲಿ ಕುರುಬ ಸಮುದಾಯದವರು ಎಸ್ ಸಿ, ಎಸ್.ಟಿ., ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದಲ್ಲಿಯೂ ಇದ್ದಾರೆ. ಕಲಬುರ್ಗಿ, ಬೀದರ್, ಯಾದಗಿರಿಯಲ್ಲಿ ಗೊಂಡ, ರಾಜಗೊಂಡ ಕುರುಬ ಸಮುದಾಯದವರು ಎಸ್ಟಿಗೆ ಸೇರಿದರೆ, ಕೊಡಗು ಜಿಲ್ಲೆಯಲ್ಲಿ ಎಲ್ಲ ಕುರುಬರು ಎಸ್ಟಿಗೆ ಸೇರಿದ್ದಾರೆ ಎಂದರು.
ಕಲಬುರ್ಗಿ, ಬೀದರ್, ಯಾದಗಿರಿಯಲ್ಲಿ ಕುರುಬರು ಮತ್ತು ಗೊಂಡ ಸಮುದಾಯದವರು ಒಂದೇ ಆಗಿದ್ದು, ಈ ಸಮುದಾಯಗಳನ್ನು ಎಸ್ಟಿಗೆ ಸೇರಿಸಬೇಕು ಎಂದು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಈಗ ಈ ವಿಚಾರವು ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಗೊಲ್ಲರು, ಕುರುಬರು, ಕೋಳಿ ಸಮಾಜವು ಸೇರಿದಂತೆ ವಿವಿಧ ಸಮಾಜಗಳನ್ನು ಎಸ್ ಟಿ ಸಮುದಾಯಕ್ಕೆ ಸೇರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ನಾನು ಜಾತಿ ಮಾಡಿದವನಲ್ಲ:
ನಾನು ಯಾವತ್ತೂ ಜಾತಿ ಮಾಡುವವನಲ್ಲ. ಸಾಮಾಜಿಕ ನ್ಯಾಯ ನನ್ನ ಉಸಿರು. ಅವಕಾಶ ವಂಚಿತ ಜಾತಿಗಳ ಜನ ತಮ್ಮ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತ ಸಮಾವೇಶ ನಡೆಸುವುದು ತಪ್ಪಲ್ಲ ಎಂದು ಸಮಾಜವಾದಿ ನಾಯಕ ರಾಮಮನೋಹರ ಲೋಹಿಯಾ ಹೇಳಿದ್ದರು. ಅದರಂತೆ ಈ ಸಮಾವೇಶ ನಡೆಯುತ್ತಿದೆ ಎಂದು ಮುಖ್ಯಮಂತ್ರಿಗಳು ಟೀಕಾಕಾರರಿಗೆ ಉತ್ತರ ನೀಡಿದರು.
ನಾನು ಈ ಜಾತಿ ವ್ಯವಸ್ಥೆಗೆ ಯಾವತ್ತಿದ್ದರೂ ವಿರುದ್ಧ. ಆದರೆ ಅಶಕ್ತ ಜನ ಸಮುದಾಯಗಳು ತಮ್ಮ ಸಂವಿಧಾನಬದ್ದ ಹಕ್ಕುಗಳನ್ನು ಪಡೆದುಕೊಳ್ಳಲು ಸಂಘಟಿತರಾಗುವುದು ತಪ್ಪಲ್ಲ ಎಂದು ನಂಬಿದ್ದೇನೆ. ಅಶಕ್ತ ಸಮುದಾಯಗಳು ಸಂಘಟಿತರಾಗದೇ ಇರುವುದರಿಂದ ಮತ್ತು ತಮ್ಮಲ್ಲಿ ನಾಯಕತ್ವ ಬೆಳೆಸಿಕೊಳ್ಳದೇ ಇರುವುದರಿಂದ ಅವರ ಪಾಲಿನ ಹಕ್ಕುಗಳು ಮತ್ತು ರಾಜಕೀಯ ಅಧಿಕಾರದಿಂದ ವಂಚಿತವಾಗಿವೆ ಎಂದು ವಿವರಿಸಿದರು.
ಕಾಗಿನೆಲೆ ಕನಕ ಗುರು ಪೀಠದ ಶ್ರೀ ಶ್ರೀ ನಿರಂಜನಾನಂದ ಸ್ವಾಮೀಜಿ, ಈಶ್ವರಾನಂದಪುರಿ ಸ್ವಾಮೀಜಿ, ಸಿದ್ದರಾಮಾನಂದಪುರಿ ಸ್ವಾಮೀಜಿ ಹಾಗೂ ಅರ್ಜುನಾಭಾಯಿಪುರಿ ಸ್ವಾಮೀಜಿಯವರುಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಹರಿಯಾಣದ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ಸಮಾವೇಶ ಉದ್ಘಾಟಿಸಿದ ಕಾರ್ಯಕ್ರಮವನ್ನು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ನ ಅಧ್ಯಕ್ಷರಾದ ಮಾಜಿ ಮಂತ್ರಿ ಹೆಚ್.ವಿಶ್ವನಾಥ್ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿಯ ರಾಜ್ಯ ಸಚಿವ ಫಗ್ಗಾನ್ ಸಿಂಗ್ ಕುಲಾಸ್ತೆ, ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಗೋವಾ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಚಂದ್ರಕಾಂತ್ ಬಾಬು ಕಾವಲೇಕರ್, ಮಹಾರಾಷ್ಟ್ರ ರಾಜ್ಯದ ಮಾಜಿ ಸಚಿವ ಮಹದೇವ್ ಜನಕಾರ್, ದತ್ತಾತ್ರೇಯ ಭರ್ನೆ, ರಾಮ ಶಂಕರ್ ಶಿಂದೆ, ಶೆಫರ್ಡ್ ಇಂಟರ್ ನ್ಯಾಷನಲ್ ಉಪಾಧ್ಯಕ್ಷ ಹೆಚ್.ಎಂ.ರೇವಣ್ಣ, ಮಾಜಿ ಸಚಿವ ಬಂಡೆಪ್ಪ ಕಾಶಂಪುರ್, ಆಂಧ್ರ. ಪ್ರದೇಶ ರಾಜ್ಯದ ಸಚಿವೆ ಕೆ.ವಿ.ಉಷಾಶ್ರೀ ಚರಣ್, ಮಾತಾ ಅಹಿಲ್ಯಾಬಾಯಿ ಹೋಳ್ಕರ್ ಅವರ ಮೊಮ್ಮಗ ಭೂಷಣ್ ರಾಜೆ ಹೋಳ್ಕರ್, ಗುಜರಾತ್ ರಾಜ್ಯದ ಮುಖಂಡರಾದ ಸಾಗರ್ ರಾಯ್ಕ ಸೇರಿ 60 ಕ್ಕೂ ಹೆಚ್ಚು ಮಂದಿ ನಾನಾ ರಾಜ್ಯಗಳ ಕುರುಬ ಮತ್ತು ಗೋಪಾಲಕ ಸಮುದಾಯಗಳ ಮುಖಂಡರು ಭಾಗವಹಿಸಿದ್ದರು.
ಕುರುಬ ಸಮುದಾಯಕ್ಕೆ ಇತಿಹಾಸ ಇದೆ
ನಮ್ಮ ಸಮುದಾಯಕ್ಕೆ ರಾಜಕೀಯ ಇತಿಹಾಸ ಇದೆ. ಸಂಸ್ಕೃತಿಕ ಭವ್ಯತೆ ಇದೆ. ಹಕ್ಕ ಬುಕ್ಕರಿಂದ ಹಿಡಿದು ಅಹಲ್ಯಾಬಾಯಿ ಹೋಳ್ಕರ್ವರೆಗೂ ನಮಗೊಂದು ಚರಿತ್ರೆ ಇದೆ. ಆದರೆ ಸಂಘಟನೆ ಇಲ್ಲದಿದ್ದರಿಂದ ನಮಗೆ ಸಲ್ಲಬೇಕಾಗಿದ್ದು ಸಲ್ಲುತ್ತಿರಲಿಲ್ಲ. ಸಂಘಟನೆ ಇಲ್ಲದಿದ್ದರೆ ಕಾಗಿನೆಲೆ ಗುರುಪೀಠ, ಸಂಸ್ಥಾನ ಆಗುತ್ತಿರಲಿಲ್ಲ. ಕಾಗಿನೆಲೆ ಪೀಠ ಒಂದು ಜಾತಿಯ ಮಠ ಅಲ್ಲ. ಎಲ್ಲಾ ಶೋಷಿತ ಸಮುದಾಯಗಳಿಗೆ ಸೇರಿದ್ದು ಕಾಗಿನೆಲೆ ಪೀಠ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.