ಸುದ್ದಿಮೂಲ ವಾರ್ತೆ
ಬೆಂಗಳೂರು, ನ.23: ಬಿಜೆಪಿ ನಾಯಕತ್ವದ ವಿರುದ್ಧ ಅಸಮಾಧಾನಗೊಂಡಿರುವ ಶಾಸಕ ರಮೇಶ್ ಜಾರಕಿಹೊಳಿ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭೇಟಿ ನೀಡಿ ಉಪಹಾರ ಸಭೆ ನಡೆಸಿದರು. ಈ ಮೂಲಕ ಅಸಮಾಧಾನಗೊಂಡಿರುವ ಪಕ್ಷದ ನಾಯಕರ ಮನವೊಲಿಕೆಗೆ ಕಸರತ್ತು ಆರಂಭಿಸಿದ್ದಾರೆ.
ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸಕ್ಕೆ ಬೆಳಗ್ಗೆ ವಿಜಯೇಂದ್ರ ಅವರು ಭೇಟಿ ನೀಡಿದ್ದು, ಈ ವೇಳೆ ವಿಜಯೇಂದ್ರಗೆ ಜಾರಕಿಹೊಳಿ ಅವರು, ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ಇಬ್ಬರೂ ಒಟ್ಟಿಗೆ ಕುಳಿತು ಉಪಾಹಾರ ಸೇವಿಸಿದರು.
ವಿಜಯೇಂದ್ರ ನೇಮಕ ಹಾಗೂ ವಿಪಕ್ಷ ನಾಯಕ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಕೊಡದ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದರು.
ಬಳಿಕ ಮಾತನಾಡಿದ ವಿಜಯೇಂದ್ರ, ರಮೇಶ್ ಜಾರಕಿಹೊಳಿ ಅವರ ನಡೆ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆಯುತ್ತಿತ್ತು. ಕೆಲವು ಸಲ ಅವರು ಅಸಮಾಧಾನ ತೋಡಿಕೊಂಡಿದ್ದರು. ಎಲ್ಲರನ್ನೂ ಪಕ್ಷದಲ್ಲಿ ಜೊತೆಗೆ ಕರೆದೊಯ್ಯುವುದು ನನ್ನ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ಮಾಡಿದ್ದೇನೆ. ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗಬೇಕು. ಪಕ್ಷದಲ್ಲಿ ಸಹಕಾರ ಕೊಡುತ್ತೇನೆಂದು ಹೇಳಿದ್ದಾರೆಂದು ಎಂದರು.
ಪಕ್ಷದ ಹಿರಿಯರು ಏನೇ ಹೇಳಿಕೆ ಕೊಟ್ಟರೂ ಅದನ್ನು ಗಂಭೀರವಾಗಿ ಪರಿಗಣಿಸುವೆ. ಅವರೆಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವೆ. ಯಾರು ಏನೇ ಹೇಳಿಕೆ ಕೊಟ್ಟರೂ ಅದನ್ನು ಅಪಾರ್ಥ ಮಾಡಿಕೊಳ್ಳದೆ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯಾಧ್ಯಕ್ಷನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.
ಇವತ್ತು ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಸುಮಾರು 30 ನಿಮಿಷ ಮಾತನಾಡಿದ್ದೇನೆ. ಕೆಲವು ನೋವುಗಳನ್ನೂ ತೋಡಿಕೊಂಡಿದ್ದಾರೆ ಎಂದರಲ್ಲದೆ, ರಾಷ್ಟ್ರೀಯ ನಾಯಕರು, ವರಿಷ್ಠರು ಕೊಟ್ಟ ಜವಾಬ್ದಾರಿ ನಿರ್ವಹಿಸುತ್ತೇನೆ. ಎಲ್ಲರೂ ಜೊತೆಯಾಗಿ ನರೇಂದ್ರ ಮೋದಿಜೀ ಅವರ ಕೈಯನ್ನು ಬಲಪಡಿಸುತ್ತೇವೆ ಎಂದು ತಿಳಿಸಿದರು.
ನಂತರ ರಮೇಶ್ ಜಾರಕಿಹೊಳಿ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಮತ್ತು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿ ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿರುವುದಾಗಿ ಸ್ಪಷ್ಟಪಡಿಸಿದರು.