ಸುದ್ದಿಮೂಲ ವಾರ್ತೆ
ಬೆಂಗಳೂರು, ಏ, 8; ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಮತದಾನದ ಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು. ಚುನಾವಣೆಯಲ್ಲಿ ಮತದಾನ ಹೆಚ್ಚಿಸುವ ಸಲುವಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಚಿತ್ರದುರ್ಗದ ಪ್ರಮುಖ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಜಾಗೃತಿ ಜಾಥಾಕ್ಕೆ ಚಿತ್ರದುರ್ಗ ಜಿಲ್ಲಾಧಿಕಾರಿ ಜಿ.ಆರ್.ಜೆ ದಿವ್ಯಪ್ರಭು ಚಾಲನೆ ನೀಡಿದರು.
ನಗರದ ಕನಕ ವೃತ್ತದಿಂದ ಆರಂಭವಾದ ದ್ವಿಚಕ್ರ ವಾಹನ ಜಾಥಾ ಸರ್ಕಾರಿ ವಿಜ್ಞಾನ ಕಾಲೇಜಿನ ಮೈದಾನದವರೆಗೂ ನಡೆಯಿತು. ನಂತರ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮೇ 10ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮತದಾರರು ತಪ್ಪದೆ ಮತಗಟ್ಟೆಗಳಿಗೆ ತೆರಳಿ, ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗದೇ ಸ್ವ ಇಚ್ಛೆಯಿಂದ ಮತದಾನ ಮಾಡಬೇಕು ಎಂದು ಹೇಳಿದರು.
ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ ವತಿಯಿಂದ ಮುಂದಿನ ವಾರಾಂತ್ಯದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ. ಮತದಾನದ ಮಹತ್ವದ ಕುರಿತಾಗಿ ಮಡಿಕೇರಿ ರಾಜಾಸೀಟ್ನಲ್ಲಿ ಚಿತ್ರಕಲಾ ಸ್ಪರ್ಧೆ, ಜಿಲ್ಲಾ ಕ್ರೀಡಾಂಗಣದಲ್ಲಿ ಮೊಬೈಲ್ ಲೈಟ್ ಮೂಲಕ ಸಂದೇಶ ಸಾರುವಿಕೆ, ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಬೈಕ್ ಜಾಥಾ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಹೆಚ್ಚು ಮತದಾನವಾಗಲು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಿದೆ. ಆ ನಿಟ್ಟಿನಲ್ಲಿ ಮತದಾನದ ಕುರಿತು ಅಗತ್ಯ ಜಾಗೃತಿ ಮೂಡಿಸುವಲ್ಲಿ ಸ್ವೀಪ್ ಸಮಿತಿ ಜೊತೆ ಕೊಡಗು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸುವಂತೆ ಸ್ವೀಪ್ ಸಮಿತಿ ಅಧ್ಯಕ್ಷ ಡಾ.ಎಸ್.ಆಕಾಶ್ ಮನವಿ ಮಾಡಿದ್ದಾರೆ.
ವಿಧಾನಸಭೆ ಸಾರ್ವತ್ರಿಕ ಚುನಾವಣೆಯು ಗದಗ ಜಿಲ್ಲಾದ್ಯಂತ ನಿಷ್ಪಕ್ಷಪಾತ, ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಸಹಕರಿಸಬೇಕೆಂದು ಗದಗ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಲು ಗದಗ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಕಂಟ್ರೋಲ್ ರೂಂ ಆರಂಭಿಸಲಾಗಿದ್ದು, ಈ ಘಟಕ ೨೪ ಗಂಟೆಯೂ ಕಾರ್ಯನಿರ್ವಹಿಸುತ್ತಿದೆ. ಚುನಾವಣಾ ಮಾಹಿತಿ ಹಾಗೂ ದೂರುಗಳನ್ನು ಸಿ-ವಿಜಿಲ್ ಆಪ್ ಬಳಸುವುದರ ಮೂಲಕ ಸಾರ್ವಜನಿಕರು ಚುನಾವಣಾ ಅಕ್ರಮಕ್ಕೆ ಕಡಿವಾಣ ಹಾಕಲು ಮುಂದಾಗಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
18 ವರ್ಷ ಪೂರೈಸಿರುವ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ಸಂವಿಧಾನ ನೀಡಿದ್ದು, ಯಾರೊಬ್ಬರೂ ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ.ನಿಟ್ಟಾಲಿ ತಿಳಿಸಿದರು.
ಅವರಿಂದು ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರಸಭೆಯ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಧಾರವಾಡ ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನವಾಗಿರುವ ಮತಗಟ್ಟೆ ಕೇಂದ್ರಗಳಲ್ಲಿ ಈ ಬಾರಿ ಹೆಚ್ಚಿನ ಜಾಗೃತಿ ಅಭಿಯಾನ ಹಾಗೂ ವಿಶೇಷ ಕಾರ್ಯಕ್ರಮಗಳು ಆಯೋಜಿಸಲಾಗಿದೆ. ಅದರಂತೆ ಗ್ರಾಮ ಮಟ್ಟದಲ್ಲಿ ಬೀದಿ ನಾಟಕಗಳಿಗೆ ಮೂರು ತಂಡ ರಚಿಸಲಾಗಿದೆ ಎಂದು ನೂತನ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.
ಮತದಾನ ನಮ್ಮ ಹಕ್ಕು ಹಾಗೂ ಪವಿತ್ರವಾದ ಕರ್ತವ್ಯವೂ ಹೌದು. ಮತದಾನದ ಹಕ್ಕನ್ನು ಪ್ರತಿಯೊಬ್ಬರು ಚಲಾಯಿಸುವ ಮೂಲಕ ಸುಭದ್ರವಾದ ಪ್ರಜಾಪ್ರಭುತ್ವ ಕಟ್ಟೋಣ. ಯಾರು ಕೂಡ ಮತದಾನದ ಅವಕಾಶದಿಂದ ವಂಚಿತರಾಗಬೇಡಿ ಎಂದು ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.
ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಹಾಗೂ ಹಾನಗಲ್ನ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿಂದು ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಪೊಲೀಸರ ತಂಡ ಪಥಸಂಚಲನ ನಡೆಸಿತು. ಕ್ಷಿಪ್ರ ಕಾರ್ಯಾಚಣೆ ಪಡೆಯ ಸಹಾಯಕ ಕಮಾಂಡೆಂಟ್ ಪ್ರದೀಪ ಡಿ.ಟಿ, ಮಾತನಾಡಿ ಶಾಂತಿಯುತ ಮತದಾನಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕೆಂದು ಗದಗ ಜಿಲ್ಲೆಯ ರೋಣ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಾಸುದೇವ ಪೂಜಾರ ಮತದಾರರಲ್ಲಿ ಮನವಿ ಮಾಡಿದರು.