ಸುದ್ದಿಮೂಲ ವಾರ್ತೆ
ಮೈಸೂರು, ನ.09 : ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ವರುಣ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಶೋಚನೀಯವಾಗಿದೆ. ಶಾಲೆಗೆ ಮೂಲಭೂತ ಸೌಲಭ್ಯ ಒದಗಿಸದಿದ್ದರೇ ಉಗ್ರ ಹೋರಾಟ ಮಾಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಕಾರ್ಯದರ್ಶಿ ಸೋಸಲೆ ಸಿದ್ದರಾಜು ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಇಲ್ಲಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿ.ನರಸೀಪುರ ಪಟ್ಟಣದ ಹೃದಯ ಭಾಗದಲ್ಲೇ ಈ ಶಾಲೆ ವರುಣ ಕ್ಷೇತ್ರ ವ್ಯಾಪ್ತಿಗೆ ಸೇರುತ್ತದೆ. ಪ್ರಸ್ತುತ ಶಾಲೆಯಲ್ಲಿ 275 ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಈ ಶಾಲೆಯಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೂಡ ಗ್ರಾಮೀಣ ಭಾಗದಿಂದ ಬರುವ ಬಡ ವಿದ್ಯಾರ್ಥಿಗಳು.
ಇಂತಹ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇಲ್ಲವೇ ಇಲ್ಲ. ಶಾಲೆಗೆ ಹಾಕಲಾಗಿರುವ ಕಾಂಪೌಂಡ್ ಬಿದ್ದು ವರ್ಷಗಳೇ ಕಳೆದಿದೆ. ಇದರಿಂದ ಪುಂಡ ಪೋಕರಿಗಳ ಅಡ್ಡವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೂಡಲೇ ಸಿದ್ದರಾಮಯ್ಯನವರು ಈ ಸಮಸ್ಯೆ ಬಗೆಹರಿಸಬೇಕು.ಇಲ್ಲವಾದಲ್ಲಿ ಶಾಲೆಯ ಮುಂಭಾಗ ಉಗ್ರ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.