ಸುದ್ದಿಮೂಲ ವಾರ್ತೆ
ತುಮಕೂರು ಅ.21: ಮಹಿಳೆಯರು ಆರ್ಥಿವಾಗಿ ಸಬಲರಾಗುವುದರ ಜೊತೆಗೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಬಲಿಷ್ಟರಾಗಲು ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ವಿಶೇಷ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಗೊಳಿಸುತ್ತಿರುವುದು ಶ್ಲಾಘನೀಯ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್ ಅಭಿಪ್ರಾಯಪಟ್ಟರು.
ಕೊರಟಗೆರೆ ಪಟ್ಟಣದಲ್ಲಿ ಗ್ರಾಮ ಪಂಚಾಯತ್ನ ಅರ್ಹ ಫಲಾನುಭವಿಗಳಿಗೆ ಪಿಎಂಎವೈ ಮನೆ ಮಂಜೂರಾತಿ ಪತ್ರ ವಿತರಣೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ವಿವಿಧ ಇಲಾಖೆಗಳಿಂದ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹಿಳೆಯರಿಗೆ ಶಕ್ತಿ ತುಂಬುವುದಕ್ಕಾಗಿ ಸ್ತ್ರೀಶಕ್ತಿ ಸಂಘಗಳನ್ನು ಪ್ರಾರಂಭಿಸಲಾಯಿತು. ಇದರಿಂದ ಅವರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ತಾಲೂಕಿನಲ್ಲಿ ವಸತಿರಹಿತ ಕುಟುಂಬಗಳಿಗೆ ಪ್ರಧಾನಮಂತ್ರಿ ಅವಾಜ್ ಯೋಜನೆಯಡಿ ಮಂಜೂರಾದ 411 ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗಿದೆ. ಈ ಯೋಜನೆಯಡಿ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ 1.25 ಲಕ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ 1.75 ಲಕ್ಷ ಧನಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.
ನರೇಗಾ ಯೋಜನೆ ಅಡಿಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಕೈಗೊಳ್ಳುವ ತಾಲೂಕಿನ 15,000 ರೈತರಿಗೆ ಕಾಮಗಾರಿ ಮಂಜೂರಾತಿ ಆದೇಶವನ್ನು ನೀಡಲಾಗಿದೆ. ಇದರಿಂದ ರೈತರು ಬರಗಾಲದಲ್ಲಿ ಸ್ವಲ್ಪಮಟ್ಟಿಗೆ ಆರ್ಥಿಕವಾಗಿ ಸದೃಢರಾಗಬಹುದು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆಯಾಗದೆ ಶೇ.80ರಷ್ಟು ಮಳೆ ಬೆಳೆ ನಷ್ಟವಾಗಿದೆ. ಯಾವುದೇ ಬೆಳೆಯು ನಿರೀಕ್ಷಿತ ಮಟ್ಟದಲ್ಲಿ ಫಸಲು ನೀಡಿಲ್ಲವೆಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ,ಜಿಲ್ಲೆಯ ಆಡಳಿತ ವ್ಯವಸ್ಥೆಗೆ 4 ತಿಂಗಳಿನಿಂದ ನಿರಂತರವಾಗಿ ಪ್ರತಿವಾರ ಸರ್ಕಾರದ ಎಲ್ಲಾ ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನೆ ಮಾಡುವುದರ ಮೂಲಕ ಈ ಎಲ್ಲ ಯೋಜನೆಗಳ ಸೌಲಭ್ಯವನ್ನು ಜನಸಾಮಾನ್ಯರಿಗೂ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವುದಕ್ಕೆ ಗೃಹ ಸಚಿವರು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಭಾಗ್ಯಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆಗಳ ಬಾಂಡ್ಗಳನ್ನು ಅರ್ಹ ಫಲಾನುಭವಿಗಳಿಗೆ ಸಚಿವರ ಮೂಲಕ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ. ವಿ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಂ.ಎ. ಶ್ರೀಧರ್, ತಾಲೂಕ್ ಪಂಚಾಯತ್ ಆಡಳಿತಾಧಿಕಾರಿ ಜಿ.ದೀಪಶ್ರೀ, ತಾಲೂಕ್ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ.ಡಿ.ದೊಡ್ಡಸಿದ್ದಯ್ಯ, ತಹಶೀಲ್ದಾರ್ ರಂಜಿತ್ ಕೆ.ಆರ್ ಸೇರಿದಂತೆ ಮತ್ತಿತರರು ಹಾಜರಿದ್ದರು.